ಸುಳ್ಯ:110 ಕೆ.ವಿ ವಿದ್ಯುತ್ ಲೈನ್ ಕಾಮಗಾರಿಯ ಟವರ್ ನಿರ್ಮಾಣಕ್ಕೆ ಸಂಬಂಧಪಟ್ಟು ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಟವರ್ ನಿರ್ಮಾಣದ ಜಾಗ ಗುರುತಿಸುವಿಕೆಯ ಸಮೀಕ್ಷೆ ಪೂರ್ತಿಯಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 110 ಕೆವಿ ವಿದ್ಯುತ್ ಲೈನ್ ಕಾಮಗಾರಿಗೆ
ವೇಗ ಹೆಚ್ಚಿಸಲು ಎಲ್ಲಾ ಪ್ರಯತ್ನ ನಡೆಸಲಾಗಿದೆ. ಸುಳ್ಯ ತಾಲೂಕಿನಲ್ಲಿ ಒಟ್ಟು 40 ಟವರ್ ನಿರ್ಮಾಣ ಆಗಬೇಕಾಗಿದ್ದು ತಾಲೂಕು ವ್ಯಾಪ್ತಿಗೆ ಸಂಬಂಧಿಸಿದ ಕಾಮಗಾರಿಯ ಪ್ರಗತಿಯ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಾಗಿದೆ.ಟವರ್ ನಿರ್ಮಾಣ ಕಾಮಗಾರಿಗೆ ಸಮೀಕ್ಷೆ ನಡೆಸಿ ನಕ್ಷೆ ಮಾಡಲಾಗಿದೆ. ಈ ಭಾಗದಲ್ಲಿ ಸಮಸ್ಯೆ ಇಲ್ಲ ಆದಷ್ಟು ಬೇಗ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ. ಪುತ್ತೂರು ಭಾಗದ ಸಮೀಕ್ಷೆ ಆದಷ್ಟು ಬೇಗ ಮುಗಿಸಲು ಸಹಾಯಕ ಕಮೀಷನರ್ಗೆ ಸೂಚನೆ ನೀಡಲಾಗಿದೆ. ಮುಂದಿನ ವಾರ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸರಕಾರ ಬಿಡುಗಡೆ ಮಾಡುವುದಾಗಿ ತಿಳಿಸಿದ 25 ಕೋಟಿ ಅನುದಾನಕ್ಕೆ ಸಂಬಂಧಿಸಿ ಲೋಕೋಪಯೋಗಿ, ಜಿಲ್ಲಾ ಪಂಚಾಯತ್ ರಸ್ತೆಗಳ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.












