ಸುಳ್ಯ: ಬೆಳ್ಳಾರೆ ಅಯ್ಯನಕಟ್ಟೆ ಚೊಕ್ಕಾಡಿ ರಸ್ತೆ ಮಾರ್ಗವಾಗಿ 33 ಕೆ ವಿ ಕೇಬಲ್ ಅಳವಡಿಕೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ನಡೆಸುತ್ತಿರುವುದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಆದುದರಿಂದ ರಸ್ತೆ ಬದಿಯಲ್ಲಿ ಯಾವುದೇ ಕಾಮಗಾರಿ ನಡೆಸುವ ಸಂದರ್ಭದಲ್ಲಿ
ಸಾರ್ವಜನಿಕರಿಗೆ ತೊಂದರೆ ಆಗದಂತೆ ಮಾಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹಾಗೂ ನಿಯೋಜಿತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದ್ದಾರೆ.
ಬೆಳ್ಳಾರೆ-ಸುಳ್ಯ 33 ಕೆ ವಿ ಭೂಗರ್ಭ ಕೇಬಲ್ ಹಾಗೂ ಬಹು ಗ್ರಾಮ ಕುಡಿಯುವ ನೀರಿನ ಕಾಮಗಾರಿ ನಡೆಯುತ್ತಿದ್ದು ಇದರ ಫಲವಾಗಿ ರಸ್ತೆಯ ಇಕ್ಕೆಲಗಳಲ್ಲಿ ಬೃಹತ್
ಹೊಂಡಗಳನ್ನು ತೆಗೆಯಲಾಗಿದೆ. ಇದನ್ನು ಸಮರ್ಪಕವಾಗಿ ಮುಚ್ಚದೆ ಇದೀಗ ಮಳೆ ಬಂದು ವಾಹನಗಳ ಓಡಾಟಕ್ಕೆ ಮತ್ತು ಸಾರ್ವಜನಿಕ ಸಂಚಾರಕ್ಕೆ ಸಮಸ್ಯೆ ಎದುರಾಗಿದೆ. ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡುವುದಕ್ಕೆ ತಮ್ಮ ವಿರೋಧ ಇಲ್ಲಾ. ಆದರೆ ಇದೀಗ ಇಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ವಾಹನ ಸಂಚಾರಕ್ಕೆ, ಸಾರ್ವಜನಿಕರಿಗೆ ತೊಂದರೆ ಆಗಿದೆ. ಕೇಬಲ್, ಪೈಪ್ ಅಳವಡಿಸಲು ಹೊಂಡ ನಿರ್ಮಾಣ ಮಾಡಿದರೆ ಅದನ್ನು ಕೂಡಲೇ ಸಮರ್ಪಕವಾಗಿ ಮುಚ್ಚಬೇಕು. ಇದೀಗ ಉಂಟಾಗಿರುವ ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕು. ತಪ್ಪಿದಲ್ಲಿ ಸಾರ್ವಜನಿಕರನ್ನು ಸೇರಿಸಿ ಹೋರಾಟ ನಡೆಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಇದನ್ನು ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಧಕೃಷ್ಣ ಬೊಳ್ಳೂರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.