ಸುಳ್ಯ:ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಇದೊಂದು ಅಮಾನವೀಯ ಕೃತ್ಯ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರಕಾರ ಮತ್ತು ಪೊಲೀಸ್ ಇಲಾಖೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಗ್ರಹಿಸಿದ್ದಾರೆ. ಆ್ಯಸಿಡ್ ದಾಳಿ ಒಳಗಾದ
ವಿದ್ಯಾರ್ಥಿನಿಯರಿಗೆ ಸರಕಾರದಿಂದ ಸಂಪೂರ್ಣ ಚಿಕಿತ್ಸಾ ವೆಚ್ಚ ಹಾಗೂ ಗರಿಷ್ಠ ಮೊತ್ತದ ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕರು ಮಂಗಳೂರಿನ ಎಜೆ ಆಸ್ಪತ್ರೆಗೆ ಭೇಟಿ ನೀಡಿ ದಾಖಲಾಗಿರುವ ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯವನ್ನು ವಿಚಾರಿಸಿದರು ಹಾಗೂ ಪೋಷಕರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಜೊತೆಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಸಮಾಲೋಚಿಸಿ ತನಿಖೆಯನ್ನು ತೀವ್ರಗೊಳಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಿ ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆ ನಡೆಯದಂತೆ ಸೂಕ್ತ ಎಚ್ಚರಿಕೆ ಕ್ರಮವನ್ನು ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ನಂದನ್ ಮಲ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರಾಕೇಶ್ ಕೆಡೆಂಜಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.