ಸುಳ್ಯ: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಏ.25 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ. ಸುಳ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಳ್ಯಕ್ಕೆ ಎಐಸಿಸಿ ಅಧ್ಯಕ್ಷರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಿದ್ಧತೆಗಳನ್ನೂ ಮಾಡಿ ಕೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿ ನಡೆಯಲಿರುವ ಸಮಾವೇಶದ ಸಿದ್ಧತೆಗಳನ್ನು
ಪರಿಶೀಲಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕರ್ತರು ಬಹಳ ಉತ್ಸಾಹದಲ್ಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರ ಮಾತ್ರವಲ್ಲದೆ ಇತರ ತಾಲೂಕುಗಳಿಂದಲೂ ಜನರು ಆಗಮಿಸಿದ್ದಾರೆ ಎಂದು ಅವರು ಹೇಳಿದರು. ಏ.25ರಂದು ಪೂ.11ಕ್ಕೆ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಬೃಹತ್ ವೇದಿಕೆಯಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಕಾಂಗ್ರೆಸ್ ಮುಖಂಡರಾದ ಎಸ್.ಸಂಶುದ್ಧೀನ್, ಕೆ.ಎಂ.ಮುಸ್ತಫಾ, ಎಂ.ವೆಂಕಪ್ಪ ಗೌಡ, ಪಿ.ಎ.ಮಹಮ್ಮದ್, ಮಹಮ್ಮದ್ ಫವಾಝ್, ಎಸ್.ಕೆ.ಹಮೀಫ, ಧೀರಾ ಕ್ರಾಸ್ತಾ, ನೌಶಾದ್ ಕೆರೆಮೂಲೆ ಮತ್ತಿತರರು ಉಪಸ್ಥಿತರಿದ್ದರು. ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ಧಗೊಳ್ಳುತಿದೆ.
ಹೆಲಿಪ್ಯಾಡ್ ಪರಿಶೀಲನೆ:
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೆಲಿಕಾಪ್ಟರ್ ಮೂಲಕ ಸುಳ್ಯಕ್ಕೆ ಆಗಮಿಸಲಿದ್ಸಾರೆ. ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢ ಶಾಲೆಯ ಗ್ರೌಂಡ್ನಲ್ಲಿ ಹೆಲಿಪ್ಯಾಡ್ ಸಿದ್ಧಗೊಳಿಸಿದ್ದು ಹರೀಶ್ ಕುಮಾರ್ ನೇತೃತ್ವದಲ್ಲಿ ಹೆಲಿಪ್ಯಾಡ್ ವೀಕ್ಷಿಸಿದರು.