ನವದೆಹಲಿ:ಅಮೆರಿಕಾ- ಇಸ್ರೇಲ್ ಮತ್ತು ಇರಾನ್ ನಡುವಿನ ಮಹಾಯುದ್ಧವು ಜಾಗತಿಕ ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿರುವ ಹಿನ್ನಲೆಯಲ್ಲಿ ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಯಿತು.ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು
ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ದೇಶದ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ತೀವ್ರವಾಗಿದ್ದರೂ, ಭಾರತದ ಬಳಿ ಸಾಕಷ್ಟು ಪ್ರಮಾಣದ ಕಚ್ಚಾ ತೈಲ ಮತ್ತು ಎಲ್ಪಿಜಿ ದಾಸ್ತಾನು ಇದೆ ಎಂದು ಸಚಿವರು ತಿಳಿಸಿದರು. ಹಾರ್ಮುಜ್ ಜಲಸಂಧಿಯನ್ನು ಇರಾನ್ ಅಲ್ಪಕಾಲ ಬಂದ್ ಮಾಡಿದ್ದರೂ, ಈಗ ಮತ್ತೆ ಸಂಚಾರ ಮುಕ್ತವಾಗಿದೆ. ಈಗಾಗಲೇ ಹಲವು ತೈಲ ನೌಕೆಗಳು ಭಾರತಕ್ಕೆ ತಲುಪಿವೆ ಮತ್ತು ಮುಂದಿನ ದಿನಗಳಲ್ಲಿ ಇನ್ನಷ್ಟು ಹಡಗುಗಳು ಬರಲಿವೆ. ಭಾರತದ ತೈಲ ಶುದ್ಧೀಕರಣ ಘಟಕಗಳು ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತಿವೆ, ಹೀಗಾಗಿ ಪೆಟ್ರೋಲ್, ಡೀಸೆಲ್ ಅಥವಾ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಯುದ್ಧ ಪೀಡಿತ ಪ್ರದೇಶಗಳಲ್ಲಿರುವ ಭಾರತೀಯರ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.










