ಮಂಗಳೂರು:ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸರಕಾರ ಜವಾಬ್ದಾರಿಯಿಂದ ಕೆಲಸ ಮಾಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಿ ಅವರು ಮಾತನಾಡಿದರು.ಭಾಷೆ, ಸಂಸ್ಕೃತಿ ನಶಿಸಿ ಹೋಗಬಾರದು, ಅದು ನಿರಂತರ ಬೆಳೆಯಬೇಕು ಎಂಬ ನೆಲೆಯಲ್ಲಿ
ಭಾಷಾ ಅಕಾಡೆಮಿಗಳನ್ನು ಸ್ಥಾಪಿಸಲಾಗಿದೆ. ವೈವಿಧ್ಯತೆಯಲ್ಲಿ ಏಕತೆ ಕಾಣುವ ನಮ್ಮ ದೇಶದಲ್ಲಿ ಎಲ್ಲಾ ಭಾಷೆಗಳಿಗೆ ಪ್ರೋತ್ಸಾಹ, ಮಾನ್ಯತೆಯನ್ನು ನೀಡುವ ಕೆಲಸ ಅಕಾಡೆಮಿಗಳ ಮೂಲಕ ಸರಕಾರ ಮಾಡುತಿದೆ.ಆ ಮೂಲಕ ಉತ್ತೇಜಿಸಲ್ಪಡುವ ಭಾಷಾ ಸಾಂಸ್ಕೃತಿಕ ಶಕ್ತಿ ಸಮಾಜವನ್ನು ಸದಾ ಸೃಜನಶೀಲವಾಗಿರಿಸುತ್ತದೆ ಎಂದು ಅವರು ಹೇಳಿದರು.
ಸಮಾರಂಭದ ಅಧ್ಯಕ್ಷತೆ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಪ್ರಾಸ್ತಾವಿಕವಾಗಿ ಮಾತನಾಡಿ ‘ಅರೆಭಾಷೆ ಅಕಾಡೆಮಿ ಸ್ಥಾಪನೆಯಾದ ಬಳಿಕ ಅರೆಭಾಷೆಗೆ ರಾಜ್ಯಮಟ್ಟದ ಗೌರವ ಸಿಕ್ಕಿದೆ. ಅಕಾಡೆಮಿಯು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಗೆ ದೊಡ್ಡ ಕೊಡುಗೆ ನೀಡಿದೆ. ಭಾಷೆಯ ಸಾಹಿತ್ಯ ಮತ್ತು ಸಂಶೋಧನೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಅವರು ಹೇಳಿದರು.

ಅಭಿನಂದನಾ ಭಾಷಣ ಮಾಡಿದ ಲಯನ್ಸ್ ಮಾಜಿ ಗವರ್ನರ್ ಎಂ.ಬಿ.ಸದಾಶಿವ ‘ಭಾಷೆ ಕೇವಲ ಸಂವನ ಸಾಧನ ಮಾತ್ರವಲ್ಲ ಅದು ಜನಾಂಗದ ಇತಿಹಾಸ, ಸಂಸ್ಕೃತಿ ಮತ್ತು ಅಸ್ತಿತ್ವದ ಪ್ರತೀಕ. ಭಾಷೆ, ಸಂಸ್ಕೃತಿಯ ಬೆಳವಣಿಗೆಗೆ ದೊಡ್ಡ ಕೊಡುಗೆ ನೀಡಿದವರನ್ನು ಗೌರವಿಸಿರುವುದು ಅತ್ಯುತ್ತಮ ನಿದರ್ಶನ ಎಂದು ಅವರು ಹೇಳಿದರು.
ಮಾರ್ಚ್ 14ರಂದು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಶೋಧಕ ಪುತ್ತೂರು ಆನಂತರಾಜ ಗೌಡ, ಅರೆಭಾಷೆ ಸಂಘಟಕಿ ಹಾಗೂ ಸಮಾಜ ಸೇವಕಿ ಲೋಕೇಶ್ವರಿ ವಿನಯಚಂದ್ರ ಹಾಗೂ ಅರೆಭಾಷೆ ಸಾಹಿತಿ ಕಟ್ರತನ ಲಲಿತಾ ಆಯ್ಯಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.ವಿವಿಧ ಲೇಖಕರು ಸಲ್ಲಿಸಿ ಅಕಾಡೆಮಿ ಪ್ರಕಟಿಸಿದ 12 ಪುಸ್ತಕಗಳನ್ನು ಈ ಸಂದರ್ಭದಲ್ಲಿ ಸಚಿವರು ಬಿಡುಗಡೆ ಮಾಡಿದರು.
ಅರೆಭಾಷೆ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲಾವಿದರಿಗೆ ನೀಡುವ ವಾದ್ಯ ಪರಿಕರಗಳನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿತರಿಸಿದರು.
ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಎಂ.ಎ.ಗಫೂರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೋ,ಕರ್ನಾಟಕ
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೊಡಗು ಗೌಡ ಸಮಾಜದ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ,ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯ ಲೋಕಯ್ಯ ಗೌಡ.ಕೆ, ಮಂಗಳೂರು ತಾಲೂಕು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷೆ ಸೌಮ್ಯ ಸುಕುಮಾರ್, ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಯುವ ಘಟಕದ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕ ರಾಜೇಶ್.ಜಿ ಅತಿಥಿಗಳಾಗಿದ್ದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸದಸ್ಯರಾದ ಚಂದ್ರಶೇಖರ ಪೇರಾಲು,ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ,ಪಿ.ಎಸ್.ಕಾರ್ಯಪ್ಪ, ಡಾ.ಎನ್.ಎ.ಜ್ಞಾನೇಶ್, ಸೂದನ ಎಸ್.ಈರಪ್ಪ, ಲೋಕೇಶ್ ಊರುಬೈಲು, ಪಿ.ಎಂ.ಸಂದೀಪ್, ವಿನೋದ್ ಮೂಡಗದ್ದೆ, ಮೋಹನ್ ಪೊನ್ನಚ್ಚನ, ಗೋಪಾಲಕೃಷ್ಣ ಕೆ.ಸಿ, ಕುದುಪಜೆ ಕೆ.ಪ್ರಕಾಶ್ ಉಪಸ್ಥಿತರಿದ್ದರು.
ಅಕಾಡೆಮಿಯ ಸದಸ್ಯ ಚಂದ್ರಶೇಖರ ಪೇರಾಲು ಸ್ವಾಗತಿಸಿ, ರಿಜಿಸ್ಟ್ರಾರ್ ಚಿನ್ನಸ್ವಾಮಿ ವಂದಿಸಿದರು. ಸುಶ್ಮಿತ ಕಡಪಳ ಹಾಗೂ ಪುರುಷೋತ್ತಮ ಕರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.










