ಮುಂಬೈ:ಸೆಪ್ಟೆಂಬರ್ 9ರಿಂದ ಯುಎಇಯಲ್ಲಿ ಆರಂಭವಾಗಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ 15 ಮಂದಿ ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.ಮುಂಬೈಯಲ್ಲಿ ಇಂದು ನಡೆದ ಆಯ್ಕೆ ಮಂಡಳಿ ಸಭೆಯಲ್ಲಿ ಅಜಿತ್ ಅಗರಕರ್ ಅವರು ಭಾರತ ತಂಡವನ್ನು ಪ್ರಕಟಿಸಿದ್ದಾರೆ. ಟೆಸ್ಟ್ ತಂಡದ ನಾಯಕ
ಶುಭಮನ್ ಗಿಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ವೇಗಿ ಜಸ್ಪ್ರೀತ್ ಬೂಮ್ರಾ ಕೂಡಾ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಸಹ ಆಯ್ಕೆ ಮಾಡಲಾಗಿದೆ.ಸೂರ್ಯಕುಮಾರ್ ಯಾದವ್ ನೇತೃತ್ವದ ಟಿ20 ತಂಡ ಆಡಿದ ಕೊನೆಯ 20 ಪಂದ್ಯಗಳಲ್ಲಿ 17ರಲ್ಲಿ ಗೆಲುವಿನ ಸವಿಯುಂಡಿದೆ.ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಕನ್ನಡಿಗ ಕೆ.ಎಲ್.ರಾಹುಲ್, ಪ್ರಸಿದ್ಧ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಭಾರತ ತಂಡ ಇಂತಿದೆ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಸ್ಪ್ರೀತ್ ಬೂಮ್ರಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಅರ್ಷದೀಪ್ ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ತಿಲಕ್ ವರ್ಮಾ, ರಿಂಕು ಸಿಂಗ್, ವರುಣ್ ಚಕ್ರವರ್ತಿ.









