ಸುಳ್ಯ:ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಘಟನೆಯನ್ನು ಬಿಜೆಪಿ ಸುಳ್ಯ ಮಂಡಲ ಸಮಿತಿ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಖಂಡಿಸಿದ್ದಾರೆ. ಶಾಸಕರಾಗಿ ನಿರಂತರವಾಗಿ ಕ್ಷೇತ್ರದಲ್ಲಿ ಓಡಾಡುತ್ತ, ಸಚಿವರುಗಳಿಗೆ ಮನವಿ ಸಲ್ಲಿಸಿ, ಬೆನ್ನು ಹಿಡಿದು ಓಡಾಡಿ ಕ್ಷೇತ್ರದ
ಅಭಿವೃದ್ಧಿ ಕೆಲಸಗಳಿಗೆ ನಿರಂತರ ಪ್ರಯತ್ನ ಪಡುತ್ತಿದ್ದಾರೆ. ದಲಿತರ ಸಮಸ್ಯೆಗಳಿಗೆ ನಿರಂತರ ಸ್ಪಂದಿಸುತ್ತಿದ್ದು, ಸುಳ್ಯದ ಅಂಬೇಡ್ಕರ್ ಭವನ ಪೂರ್ಣಗೊಳಿಸುವಲ್ಲಿಯೂ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಹೀಗಿರುವಾಗ ಶಾಸಕಿಯನ್ನು ಹಾಗೂ ಪಕ್ಷದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ರೀತಿ ಬರೆದವರ ಬಗ್ಗೆ
ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದಿದ್ದರೆ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಲಳಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಜಾಲತಾಣದಲ್ಲಿ ಜನಪ್ರತಿನಿಧಿಗಳನ್ನು ಈ ರೀತಿ ತೇಜೋವಧೆ ಮಾಡಿರುವುದು ಅತ್ಯಂತ ಗಂಭೀರ ವಿಚಾರ ಎಂದು ಅವರು ಹೇಳಿದ್ದಾರೆ.












