ಧರ್ಮಸ್ಥಳ:ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗವಾಗಿದ್ದು, ಭಜನೆಯಿಂದ ಭಗವಂತನ ಸಾಕ್ಷಾತ್ಕಾರವಾಗಿ ಭಜಕರಲ್ಲಿ ಉತ್ತಮ ಸಂಸ್ಕಾರ ಮೂಡಿ ಬರುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಹೇಳಿದರು.ಅವರು ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ೨೮ ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭದಲ್ಲಿ
ಆಶೀರ್ವಚನ ನೀಡಿದರು.ಭಗವಂತನ ಸಾಕ್ಷಾತ್ಕಾರಕ್ಕೆ ಹಲವಾರು ಮಾರ್ಗಗಳಿದ್ದರೂ ಶ್ರದ್ಧಾ-ಭಕ್ತಿಯಿಂದ ರಾಗ, ತಾಳ, ಲಯಬದ್ಧವಾಗಿ ಶಿಸ್ತಿನಿಂದ ಭಜನೆ ಹಾಡಿದರೆ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದು ಸ್ವಾಮೀಜಿ ಹೇಳಿದರು.
ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿ, ಸನಾತನ ಸಂಸ್ಕೃತಿಯ ಪುನರುತ್ಥಾನಕ್ಕೆ ಕೃಷಿಸಂಸ್ಕೃತಿ ಮತ್ತು ಋಷಿಸಂಸ್ಕೃತಿಯನ್ನು ಮರೆಯಬಾರದು. ಭಜನೆಯಿಂದ ನಾಲಗೆ ಪವಿತ್ರವಾಗಿ ಸಾರ್ಥಕ ಬದುಕಿಗೆ ಸ್ಪೂರ್ತಿ ದೊರಕುತ್ತದೆ ಎಂದು ಲ ಹೇಳಿದರು. ಪಾಶ್ಚಾತ್ಯ ಸಂಸ್ಕೃತಿಯ

ಅಂಧಾನುಕರಣೆ ಸಲ್ಲದು ಎಂದು ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಶಿಬಿರಾರ್ಥಿಗಳು ಕಮ್ಮಟದಲ್ಲಿ ಪಡೆದ ಅನುಭವವನ್ನು ಸದುಪಯೋಗ ಮಾಡಿ ಆಯಾ ಊರಿನ ನಾಯಕರಾಗಿ ಪ್ರಗತಿಯ ರೂವಾರಿಗಳಾಗಬೇಕು. ನಿತ್ಯವೂ ರಾಗ, ತಾಳ, ಲಯಬದ್ಧವಾಗಿ ಭಜನೆ ಹಾಡಿ ಸಾರ್ಥಕ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
ಶಿಬಿರಾರ್ಥಿಗಳಿಂದ ಸಾಮೂಹಿಕ ನೃತ್ಯ ಭಜನೆ ಮತ್ತು ಕುಣಿತ ಭಜನೆ ನಡೆಯಿತು.
ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾಹರ್ಷೇಂದ್ರ ಕುಮಾರ್, ಐಶ್ವರ್ಯನಿಶ್ಚಲ್ ಕುಮಾರ್ ಉಪಸ್ಥಿತರಿದ್ದರು. ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ವರದಿ ಮಂಡಿಸಿದರು.ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಇದ್ದರು.
ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ರತ್ನವರ್ಮ ಜೈನ್ ಧನ್ಯವಾದವಿತ್ತರು.
ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.









