ಸುಳ್ಯ: ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನೋರ್ವನನ್ನು ಕೊಲೆಗೈದ ಘಟನೆ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ.ಇವರು ಬಿಜೆಪಿ ಯುವ
ಮೋರ್ಚಾ ಮುಖಂಡರಾಗಿದ್ದಾರೆ. ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಅವರು ಬೆಳ್ಳಾರೆಯಲ್ಲಿನ ತನ್ನ ಕೋಳಿ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಾರೆ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬೆಳ್ಳಾರೆ ಪೇಟೆ ಸಹಿತ ಸುತ್ತಮುತ್ತ ಪೋಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.