ಬೆಳ್ತಂಗಡಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಕ್ರಾಸ್ನಲ್ಲಿರುವ ಸಂಗಮ ಸಭಾ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ ತಾಲೂಕಿನ ವಿವಿಧ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಿ ಸಾರ್ವಜನಿಕರಿಂದ ಕುಂದು ಕೊರತೆ, ಅಹವಾಲುಗಳನ್ನು ಸ್ವೀಕರಿಸಿದರು. 374 ಫಲಾನುಭವಿಗಳು ವಿವಿಧ
ರೀತಿಯ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಡಿಎಫ್ಓ ಅಂತೋಣಿ ಮರಿಯಪ್ಪ, ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ಸುರೇಶ್ ಕುಮಾರ್, ಲಾಯಿಲಾ ಗ್ರಾ.ಪಂ. ಅಧ್ಯಕ್ಷರಾದ ಆಶಾ ಡಿಸೋಜಾ ವೇದಿಕೆಯಲ್ಲಿದ್ದರು.
ಧರ್ಮಸ್ಥಳ, ಕನ್ಯಾಡಿ ಭೇಟಿ:
ಸಚಿವ ದಿನೇಶ್ ಗುಂಡೂ ರಾವ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ನ ಗುರುದೇವ ಮಠಕ್ಕೆ ಭೇಟಿ ನೀಡಿ ಚಾತುರ್ಮಾಸ್ಯ ವೃತದಲ್ಲಿರುವ ಕ್ಷೇತ್ರದ ಮಠಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದವರು. ಕ್ಷೇತ್ರದ ವತಿಯಿಂದ ಸಚಿವರನ್ನು ಸ್ವಾಮೀಜಿ ಗೌರವಿಸಿದರು.
ಪದವಿ ಪ್ರದಾನ:
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಇಪ್ಪತ್ತೊಂಬತ್ತನೇಯ ಪದವಿ ಪ್ರದಾನ ಸಮಾರಂಭ ಉಜಿರೆ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ನಡೆಯಿತು.ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ತಾಲೂಕು ಆಸ್ಪತ್ರೆಗೆ ಭೇಟಿ:
ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಕುಂದು ಕೊರತೆಗಳನ್ನು ಪರಿಶೀಲಿಸಿ, ಸೂಕ್ತ ಪರಿಹಾರ ಒದಗಿಸಿ ಕೊಡುವ ಭರವಸೆ ನೀಡಿದರು.ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್,
ಮಾಜಿ ಶಾಸಕ ವಸಂತ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.
ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ:
ಸಚಿವ ದಿನೇಶ್ ಗುಂಡೂರಾವ್ ಅವರು ಬೆಳ್ತಂಗಡಿಯ ಪ್ರಸನ್ನ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದರು.
ಕಾರ್ಯಕರ್ತರ ಸಭೆ:
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರ ಸಭೆ ಜು.8ರಂದು ಶ್ರೀ ಗುರುನಾರಾಯಣ ಸಂಕೀರ್ಣದಲ್ಲಿ ನಡೆಯಿತು. ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಉಪಸ್ಥಿತಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಕಾರ್ಯಕರ್ತರೊಂದಿಗೆ ಸಚಿವರ ಸಂವಾದ ಕಾರ್ಯಕ್ರಮ ನಡೆಯಿತು.