ಬಂಟ್ವಾಳ: ರಾಜ್ಯ ಸರ್ಕಾರ ಒಂದೂವರೆ ವರ್ಷದಲ್ಲಿ ಒಂದೇ ಒಂದು ಹೊಸ ಯೋಜನೆ ಘೋಷಣೆ ಮಾಡಿಲ್ಲ. ಯಾವ ಶಾಸಕರೂ ಒಂದೇ ಒಂದು ಗುದ್ದಲಿ ಪೂಜೆ ಮಾಡಲು ಸಾಧ್ಯವಾಗಿಲ್ಲ. ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಅಭಿವೃದ್ಧಿ ಶೂನ್ಯ ಸರ್ಕಾರವಿದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಬಂಟ್ವಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯ
ಯುವ ಕಾಯಕರ್ತ, ಹಿಂದುತ್ವದ ಕಟ್ಟಾಳು ಕಿಶೋರ್ ಕುಮಾರ್ ಪುತ್ತೂರು ಅವರನ್ನು ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದೇವೆ. ಅವರು ದೊಡ್ಡ ಅಂತರದಲ್ಲಿ ಗೆಲ್ಲಿಸಲಿದ್ದೇವೆ’ ಎಂದರು.ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಯಾರು ಅಭ್ಯರ್ಥಿ ಎಂಬುದು ಇನ್ನೂ ತೀರ್ಮಾನ ಅಗಿಲ್ಲ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದರು.
ಬೃಹತ್ ಸಮಾವೇಶ:
ವಿಧಾನ ಪರಿಷತ್ ಉಪಚುನಾವಣೆ ಹಿನ್ನಲೆಯಲ್ಲಿ ಬಂಟ್ವಾಳದ ಬಂಟರ ಭವನದಲ್ಲಿ ಬಿಜೆಪಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಕಾರ್ಯ ಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗವಹಿಸಿದರು. ಕರ್ನಾಟಕ ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ಸಂಸದರಾದ ಕ್ಯಾ.ಬೃಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನೀಲ್ ಕುಮಾರ್, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರಭಾರಿ ಉದಯ ಕುಮಾರ್, ಜಿಲ್ಲಾ ಚುನಾವಣಾ ಪ್ರಭಾರಿ ಕ್ಯಾ.ಗಣೇಶ್ ಕಾರ್ಣಿಕ್, ಜಿಲ್ಲಾ ವಕ್ತಾರ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು