ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ವಿಚಾರದಲ್ಲಿ ಉದ್ಭವಿಸಿರುವ ಬಿಕ್ಕಟ್ಟನ್ನು ಪರಿಹರಿಸಲು ಕೆಪಿಸಿಸಿ ನೇಮಕ ಮಾಡಿರುವ ವೀಕ್ಷಕರು ಸಭೆ ನಡೆಸಿ ನಾಯಕರಿಂದ ಹಾಗೂ ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿತು.ವೀಕ್ಷಕರಾಗಿ ನೇಮಕಗೊಂಡ ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಆರ್. ಸುದರ್ಶನ್ ಮತ್ತು ಎಂ. ನಾರಾಯಣಸ್ವಾಮಿ ಅವರು ಮಾ.1ರಂದು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಛೇರಿಯಲ್ಲಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದರು. ಆರಂಭದಲ್ಲಿ
ಸಭೆಯಲ್ಲಿ ಮಾತನಾಡಿದ ಅವರು ಬಳಿಕ ಪ್ರತಿಯೋರ್ವರನ್ನೂ ಪ್ರತ್ಯೇಕವಾಗಿ ಕರೆಸಿ ಅಭಿಪ್ರಾಯವನ್ನು ದಾಖಲಿಸಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ಹಾಲಿ ಅಧ್ಯಕ್ಷ ಪಿ.ಸಿ.ಜಯರಾಮ, ನೂತನವಾಗಿ ನೇಮಕಗೊಂಡ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು,ಮಾಜಿ ಅಧ್ಯಕ್ಷರುಗಳು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿ ಸುಳ್ಯದ ಸುಮಾರು 200 ಮಂದಿ ಮಂಗಳೂರಿಗೆ ತೆರಳಿ ವೀಕ್ಷಕರ ಮುಂದೆ ತಮ್ಮ ಅಭಿಪ್ರಾಯವನ್ನು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಹಿರಿಯ ನಾಯಕರುಗಳು, ಉಸ್ತುವಾರಿ ಕೆಪಿಸಿಸಿ ಕಾರ್ಯಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು,ವಿಧಾನಸಭಾ ಅಭ್ಯರ್ಥಿ, ಲೋಕಸಭಾ ಅಭ್ಯರ್ಥಿ, ಜಿಲ್ಲೆಯ ಹಿರಿಯ ನಾಯಕರುಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಎಲ್ಲಾ ಮುಂಚೂಣಿ ಘಟಕ, ವಿಭಾಗ ಮತ್ತು ಸೆಲ್ ಗಳ ಪ್ರಮುಖರ ಜೊತೆ ಚರ್ಚೆ ನಡೆಸಿ ಅಭಿಪ್ರಾಯ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಆದೇಶ ಮಾಡಿತ್ತು. ಇದಕ್ಕೆ ಸ್ಥಳೀಯ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ ಕಾರಣ ಕೆಪಿಸಿಸಿಯಿಂದ ನೇಮಕಾತಿಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಈ ಬಗ್ಗೆ ಸ್ಥಳೀಯವಾಗಿ ಎಲ್ಲರ ಅಭಿಪ್ರಾಯವನ್ನು ಪಡೆದು ಒಮ್ಮತದ ಆಯ್ಕೆ ಪ್ರಕ್ರಿಯೆಗಳನ್ನು ನಡೆಸಲು ಅಭಿಪ್ರಾಯ ಪಡೆದು ವರದಿ ಸಲ್ಲಿಸುವಂತೆ ವೀಕ್ಷಕರಿಗೆ ಕೆಪಿಸಿಸಿ ಅಧ್ಯಕ್ಷರು ಸೂಚಿಸಿದ್ದಾರೆ. ಸಭೆಯಲ್ಲಿ ಪಡೆದ ಅಭಿಪ್ರಾಯದ ಆಧಾರದಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ವೀಕ್ಷಕರು ವರದಿಯನ್ನು ಸಲ್ಲಿಸಲಿದ್ದಾರೆ. ಈ ವರದಿಯನ್ನು ಪರಿಶೀಲಿಸಿ ಅಧ್ಯಕ್ಷರು ಮುಂದಿನ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷರು ಆದೇಶ ಮಾಡಿದ್ದರು. ಈ ನೇಮಕಾತಿಯ ವಿರುದ್ಧ ಕೆಲವು ಮುಖಂಡರು ಕೆಪಿಸಿಸಿಗೆ ದೂರು ಸಲ್ಲಿಸಿದ ಕಾರಣ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.