ಸುಳ್ಯ:ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕ ಮಾಡಿರುವುದಕ್ಕೆ ಕೆಪಿಸಿಸಿ ತಾತ್ಕಾಲಿಕವಾಗಿ ತಡೆ ಹಿಡಿದಿದೆ.ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಸುಳ್ಯದ ಕೆಲವು ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಲ್ಲಿಗೆ ಹೋಗಿ ನೇಮಕದ ಬಗ್ಗೆ
ತಮ್ಮ ಅಸಮಾಧಾನ ಮತ್ತು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಧಾಕೃಷ್ಣ ಬೊಳ್ಳೂರು ಅವರ ನೇಮಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕ ತಡೆಹಿಡಿದು ಆದೇಶ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ವಾರ ರಾಧಾಕೃಷ್ಣ ಬೊಳ್ಳೂರು ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷರು ಆದೇಶ ಮಾಡಿದ್ದರು. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಆದೇಶ ಪತ್ರವನ್ನು ಬೊಳ್ಳೂರು ಅವರಿಗೆ ಹಸ್ತಾಂತರ ಮಾಡಿದ್ದರು. ಅಧ್ಯಕ್ಷರಾಗಿ ನೇಮಕಗೊಂಡ ಬೊಳ್ಳೂರು ಅವರು ಫೆ.24 ರಂದು ಪದಗ್ರಹಣ ಮಾಡುವುದಾಗಿ ತಿಳಿಸಿದ್ದರು. ಇದೀಗ ಆದೇಶ ತಾತ್ಕಾಲಿಕವಾಗಿ ತಡೆ ಹಿಡಿದಿರುವ ಕಾರಣ ಪದಗ್ರಹಣ ಸಮಾರಂಭ ರದ್ದುಗೊಳ್ಳುವ ಸಾಧ್ಯತೆ ಇದೆ.