ಸುಳ್ಯ: ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆಗೆ ಆಗಮಿಸುವುದಾಗಿ ಹೇಳಿದ್ದರೂ ಅರಮನೆಗಯ ಸೇತುವೆಯನ್ನು ತರಾತುರಿಯಲ್ಲಿ ಶಾಸಕರು ಉದ್ಘಾಟಿಸಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆಸಿ ಸೇತುವೆಯನ್ನು
ಮತ್ತೆ ಉದ್ಘಾಟನೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.ಸರಕಾರದ ವಿಪತ್ತು ಉಪಶಮನ ನಿಧಿಯಿಂದ ಅನುದಾನ ಬಿಡುಗಡೆ ಆಗಿದೆ. ಅನುದಾನ ಬಿಡುಗಡೆಗೆ ಜಿಲ್ಲಾ ಉಸ್ತುವಾರಿ ಸಚಿವರು ಪತ್ರ ನೀಡಿದ್ದರು. ಲೋಕೋಪಯೋಗಿ ಸಚಿವರ ಮುತುವರ್ಜಿಯಿಂದ ಅನುದಾನ ಬಿಡುಗಡೆ ಆಗಿದೆ ಎಂದ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡಿ ಅಷ್ಟು ತರಾತುರಿಯಲ್ಲಿ ಉದ್ಘಾಟನೆ ಮಾಡುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು.ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುದಾನಕ್ಕಾಗಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.ಇನ್ನೂ ಅನುದಾನ ತರುತ್ತೇವೆ ಎಂದು ಅವರು ಪತ್ರಕರ್ತರ ಪ್ರಶ್ನಗೆ ಉತ್ತರಿಸಿದರು.
ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರ ಸರಕಾರದ ವೈಫಲ್ಯ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಬದುಕು ಅಯೋಮಯವಾಗಿದೆ. ಇದರಿಂದ ವಿದ್ಯಾರ್ಥಿಗಳ ಬದುಕಿನೊಂದಿಗೆ ಚೆಲ್ಲಾಟ ಆಡುವ ಪರಿಸ್ಥಿತಿ ಉಂಟಾಗಿದೆ ಎಂದು ರಾಧಾಕೃಷ್ಣ ಬೊಳ್ಳೂರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಅಂಬೆಕಲ್ಲು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಉಪಸ್ಥಿತರಿದ್ದರು.














