ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು. ನಗರದ ಪತ್ರಿಕಾ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರಶಸ್ತಿ ಪ್ರದಾನಗೈದು ಮಾತಾಡಿದರು.”ಪ್ರತಿಯೊಂದು ಕಡೆಯಲ್ಲೂ ಪಾಸಿಟಿವ್
ಮತ್ತು ನೆಗೆಟಿವ್ ಅಭಿಪ್ರಾಯ ಇದ್ದೇ ಇರುತ್ತದೆ. ನಾವು ನೋಡುವ ರೀತಿ ಪಾಸಿಟಿವ್ ಆಗಿದ್ದರೆ ಎಲ್ಲವೂ ಪಾಸಿಟಿವ್ ಆಗಿಯೇ ಗೋಚರಿಸುತ್ತದೆ. ಮಂಗಳೂರು ಅನ್ನುವುದೇ ಒಂದು ದೊಡ್ಡ ಬ್ರಾಂಡ್. ಬೇರೆ ಕಡೆಗಿಂತ ಇಲ್ಲಿನ ಜನರು ಭಿನ್ನವಾಗಿದ್ದಾರೆ. ಇಲ್ಲಿನ ಜನರು ವಿಶ್ವದಲ್ಲಿ ಗುರುತಿಸಲ್ಪಡುತ್ತಿದ್ದಾರೆ ಎಂದರು. ಪತ್ರಕರ್ತರು ಪಾಸಿಟಿವ್ ವರದಿ ಮಾಡಿದರೆ ನಾಡಿನ ಯಶಸ್ಸು ಇನ್ನಷ್ಟು ಎತ್ತರಕ್ಕೇರಲು ಮತ್ತು ಸೌಹಾರ್ದತೆ ನೆಲೆಸಲು ಸಾಧ್ಯ ಎಂದರು.
ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕ್ಯಾ. ಗಣೇಶ್ ಕಾರ್ಣಿಕ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ, ಆಯುಷ್ ಇಲಾಖೆಯ ಮುಹಮ್ಮದ್ ಇಕ್ಬಾಲ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಹಿರಿಯ ಪತ್ರಕರ್ತ ಹರ್ಷ,
ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನ್ನಾಡಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್ ನಿರೂಪಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.