ಮಂಗಳೂರು: ಸಿಎಂ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ರಾಜ್ಯ ಬಜೆಟ್ ಕೇವಲ ಅಂಕಿ-ಅಂಶಗಳ ಕಸರತ್ತಾಗಿದ್ದು, ಇದು ರಾಜ್ಯದ ಜನತೆಯನ್ನು ಇನ್ನಷ್ಟು ಸಾಲದ ಸುಳಿಯಲ್ಲಿ ಸಿಲುಕಿಸುವುದರಲ್ಲಿ ಅನುಮಾನವಿಲ್ಲ. ಯಾವುದೇ ಮಹತ್ವಾಕಾಂಕ್ಷೆಯ ಅಥವಾ
ಉದ್ಯೋಗ ಸೃಷ್ಟಿಸುವ ಯೋಜನೆಗಳನ್ನು ಘೋಷಣೆ ಮಾಡದಿರುವುದು ಕೂಡ ಖೇದಕರ ಎಂದು ಅವರು ಟೀಕಿಸಿದ್ದಾರೆ. ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಯಾವುದೇ ಹೊಸ ಯೋಜನೆಗಳನ್ನು ಘೋಷಿಸದೆ ದಕ್ಷಿಣ ಕನ್ನಡದಂಥ ಜಿಲ್ಲೆಯನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಕ್ಯಾ.ಚೌಟ ಅವರು, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಸೇರಿದಂತೆ ಅಕ್ಕ-ಪಕ್ಕದ ಹಲವು ಜಿಲ್ಲೆಗಳ ಬಡ ರೋಗಿಗಳಿಗೆ ಆಸರೆಯಾಗಿರುವ ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆ ಅಭಿವೃದ್ದಿಗೆ ಈ ಬಜೆಟ್ನಲ್ಲಿ ಯಾವುದೇ ವಿಶೇಷ ಪ್ಯಾಕೇಜ್ ನೀಡಿಲ್ಲ. ರಾಜ್ಯದಾದ್ಯಂತ ಇರುವ ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಸೇವೆಗಳನ್ನು ಮೇಲ್ದರ್ಜೆಗೇರಿಸಲು ಇಡೀ ರಾಜ್ಯಕ್ಕೆ ಕೇವಲ 45 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದು ಹಾಸ್ಯಾಸ್ಪದವಾಗಿದೆ ಎಂದು ಹೇಳಿದ್ದಾರೆ.









