ಚೆಯ್ಯಂಡಾಣೆ:ಕನ್ನಡ ಉಪ ಭಾಷೆಯಾದ ಅರೆಭಾಷೆ ಉಳಿಸಿ ಬೆಳೆಸುವಂತಾಗಲು ಕನ್ನಡ ಭಾಷೆ ಜೊತೆಗೆ ಅರೆಭಾಷೆಯನ್ನೂ ಕಲಿಯಬೇಕು ಎಂದು ಗಣ್ಯರು ಪ್ರತಿಪಾದಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಚೆಯ್ಯಂಡಾಣೆಯ ನರಿಯಂದಡ ಅಯ್ಯಪ್ಪ ಯುವಕ ಸಂಘ ಸಹಕಾರದಲ್ಲಿ ಚೆಯ್ಯಂಡಾಣೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ‘ಅರೆಭಾಷೆ ಗಡಿನಾಡ ಉತ್ಸವ’ ಕಾರ್ಯಕ್ರಮದ ಸಮಾರೋಪದಲ್ಲಿ
ಗಣ್ಯರು ಮಾತನಾಡಿದರು. ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ ಅವರು ರಾಷ್ಟ್ರದಲ್ಲಿ ಅನೇಕ ಭಾಷೆ ಮತ್ತು ಉಪ ಭಾಷೆಗಳಿದ್ದು, ಕನ್ನಡದ ಉಪ ಭಾಷೆಯಲ್ಲಿ ಅರೆಭಾಷೆಯೂ ಒಂದಾಗಿದೆ. ಕನ್ನಡ ಭಾಷೆ ಜೊತೆಗೆ ಅರೆಭಾಷೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಜೊತೆಗೆ ಅರೆಭಾಷೆಯನ್ನು ಮಾತನಾಡುವಂತಾಗಬೇಕು ಎಂದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಅರೆಭಾಷೆ ಸಂಸ್ಕೃತಿ, ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಇದರಿಂದ ನಾಡಿನ ಸಣ್ಣ ಸಣ್ಣ ಭಾಷಿಕರ ಸಂಸ್ಕೃತಿ ಉಳಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಹಿಂದಿನಿಂದಲೂ ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ನಮ್ಮ ನಮ್ಮ ಮಾತೃ ಭಾಷೆ ಮಾತನಾಡಿದರೆ ಅದರಂತ ಸಂತಸ ಮತ್ತೊಂದಿಲ್ಲ, ಆದ್ದರಿಂದ ಸ್ಥಳೀಯ ಭಾಷೆ ಮತ್ತು ಸಂಪ್ರದಾಯ ಮರೆಯಬಾರದು ಎಂದರು.
ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ, ಮಡಿಕೇರಿ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೊಟ್ಟಕೇರಿಯನ ದಯಾನಂದ ಮಾತನಾಡಿದರು.
ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಅಕಾಡೆಮಿ ಉದ್ದೇಶ, ಕಾರ್ಯಚಟುವಟಿಕೆ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.
ಗ್ರಾಮದ ಹಿರಿಯರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಚೆಯ್ಯಂಡಾಣೆ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷರಾದ ಹರಿಪ್ರಸಾದ್ ಬೆಳ್ಳಿಯಂಡ್ರ, ಮೈಸೂರು ಗೌಡ ಸಮಾಜದ ಮಾಜಿ ಅಧ್ಯಕ್ಷರಾದ ತೋಟಂಬೈಲು ಮನೋಹರ್, ಕೆದಮುಳ್ಳೂರು ಗ್ರಾ.ಪಂ.ಮಾಜಿ ಸದಸ್ಯರಾದ ಗೌಡುಧಾರೆ ಚೋಟು ಬಿದ್ದಪ್ಪ, ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ವಿನೋದ್ ಮೂಡಗದ್ದೆ, ಚಂದ್ರಶೇಖರ ಪೇರಾಲು, ನಿಡ್ಯಮಲೆ ಜ್ಞಾನೇಶ್, ಲತಾ ಪ್ರಸಾದ್ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಲೋಕೇಶ್ ಊರುಬೈಲು, ಪೊನ್ನಚ್ಚನ ಮೋಹನ್, ಕುದುಪಜೆ ಪ್ರಕಾಶ್ ಇತರರು ಇದ್ದರು.