ಬೆಂಗಳೂರು:ಎಲ್ಲರ ಸಹಕಾರದಿಂದ ರಾಜ್ಯವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ದು ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕ ನಿರ್ಮಾಣ ಸರಕಾರದ ಗುರಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ
ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ ಎಂದು ತಿಳಿಸಿದ್ದಾರೆ. ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ. ಈ ಅವಕಾಶವನ್ನು ನನಗೆ ಕರುಣಿಸಿದ ಹಿರಿಯರಿಗೆ, ಮಾರ್ಗದರ್ಶಕರಿಗೆ ಹಾಗೂ ನನ್ನ ಶಕ್ತಿಯಾಗಿ ನಿಂತ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದು ಹೇಳಿದ್ದಾರೆ.ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಬನ್ನಿ, ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ಹೇಳಿದ್ದಾರೆ. ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ
ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ನನ್ನ ಪ್ರೀತಿಯ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತ ಬಂಧುಗಳ ಆಶೀರ್ವಾದದಿಂದ ಲೋಕಭವನದಲ್ಲಿ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ಸಮಾನತೆ, ಸೌಹಾರ್ದತೆ ಮತ್ತು ಸಾಮಾಜಿಕ ನ್ಯಾಯದ ಸಂಕೇತವಾಗಿರುವ ಈ ಮಹನೀಯರ ಮಾರ್ಗದರ್ಶನದಲ್ಲೇ, ನಾಡಿನ ಪ್ರತಿಯೊಬ್ಬ ನಾಗರಿಕನ ಕಲ್ಯಾಣವನ್ನು ಸಾಧಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಸರ್ವಜನಾಂಗದ ಶಾಂತಿಯ ತೋಟ’ವಾಗಿರುವ ನಮ್ಮ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವ ಜವಾಬ್ದಾರಿ ಈಗ ನಮ್ಮೆಲ್ಲರ ಮೇಲಿದೆ. ಪರಸ್ಪರ ಕೈಜೋಡಿಸಿ, ಒಗ್ಗಟ್ಟಿನಿಂದ ಬಲಿಷ್ಠ ಕರ್ನಾಟಕವನ್ನು ಕಟ್ಟಲು ಶ್ರಮಿಸೋಣ. ನಮ್ಮ ಮುಂದಿನ ಪೀಳಿಗೆಗೆ ಸುಂದರ, ಸಮೃದ್ಧ ಹಾಗೂ ಉಜ್ವಲ ಭರವಸೆಯ ನಾಡನ್ನು ಉಡುಗೊರೆಯಾಗಿ ನೀಡಲು ಒಟ್ಟಾಗಿ ಮುನ್ನಡೆಯೋಣ ಎಂದು ಹೇಳಿದ್ದಾರೆ.














