ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷಿ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ ಪತ್ರ ಬರೆದಿದ್ದು, ಅವರ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಧಾನಿಗೆ ಮನವಿ ಪತ್ರ ನೀಡಿದ್ದಾರೆ.
ಉಡುಪಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅವರು ಶುಕ್ರವಾರ ಆಗಮಿಸಿದ ವೇಳೆ
ಮನವಿ ಪತ್ರವನ್ನು ನೀಡಲಾಗಿದೆ.ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿಗಳ ಪತ್ರವನ್ನು ತಲುಪಿಸಲಾಗಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ತಿಳಿಸಿ, ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಆಸಕ್ತಿ ತೋರಿಸಬೇಕೆಂದು ಅದರಲ್ಲಿ ಮನವಿ ಮಾಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪತ್ರದಲ್ಲಿ ರೈತರ ಸಂಕಷ್ಟವನ್ನು ಕೂಲಂಕುಷವಾಗಿ ವಿವರಿಸಲಾಗಿದೆ. ಕರ್ನಾಟಕದಲ್ಲಿ 17.94 ಲಕ್ಷ ಹೆಕ್ಟೇರ್ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 4.16 ಲಕ್ಷ ಹೆಕ್ಟೇರ್ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಹೆಸರು ಕಾಳನ್ನು ಬೆಳೆದಿದ್ದು, ತೀವ್ರ ಬೆಲೆ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಂಬಲ ಬೆಲೆಯಲ್ಲಿ ರೈತರ ಬೆಳೆಗಳನ್ನು ಖರೀದಿಸುವಂತಹ ವ್ಯವಸ್ಥೆ ನಿರ್ಮಾಣ ಮಾಡುವ ಕುರಿತು ಈ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್ಗಳಷ್ಟು ಮೆಕ್ಕೆಜೋಳ ಲಭ್ಯವಿದೆ. ಆದ್ದರಿಂದ, ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ದರ ನಿಗದಿ ಮಾಡುವಂತೆ ವಿನಂತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.













