ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ
ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.
ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು. ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿಗಳು ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.














