ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ಸಲ್ಲಿಸಲಾದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಅಂಗೀಕರಿಸಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಗೆ ಅಧಿಕೃತ ಮುದ್ರೆ ಬಿದ್ದಂತಾಗಿದೆ.ರಾಜ್ಯಪಾಲರ ಅನುಪಸ್ಥಿತಿಯಲ್ಲಿ ರಾಜ್ಯಪಾಲರ
ಕಾರ್ಯದರ್ಶಿ ಪ್ರಭು ಶಂಕರ್ ಅವರು ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದರು. ನಂತರ ರಾಜ್ಯಪಾಲರು ರಾಜಿನಾಮೆ ಅಂಗೀಕರಿಸಿ ಅಧಿಸೂಚನೆ ಹೊರಡಿಸಿದ್ದಾರೆ.
ಇದರ ಜೊತೆಗೆ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸುವವರೆಗೂ ಸಿದ್ದರಾಮಯ್ಯ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸಹ ರಾಜ್ಯಪಾಲರ ಕಚೇರಿ ಸ್ಪಷ್ಟಪಡಿಸಿದೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಈಗಾಗಲೇ ದೆಹಲಿಗೆ ತೆರಳಿದ್ದು, ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವದೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.















