ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದಂತೆ ಹಲವು ವಿಷಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ಮಹದಾಯಿ ಮತ್ತು ಮೇಕೆದಾಟು ಯೋಜನೆಗಳು ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿಗಳ ಗಮನ ಸೆಳೆದಿದ್ದಾರೆ.ಈ ವೇಳೆ
ಸಿದ್ದರಾಮಯ್ಯ ಅವರ ಜೊತೆ ಸಚಿವ ಕೃಷ್ಣಭೈರೇಗೌಡ ಇದ್ದರು.ಪ್ರಧಾನಿ ಭೇಟಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಒಟ್ಟು 5 ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿರೋದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 14,58,000 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಆ ಕುರಿತು ನಾವು ಜಂಟಿ ಸಮೀಕ್ಷೆ ಮಾಡಿಸಿದ್ದೇವೆ. ರಾಜ್ಯದಲ್ಲಿ ಒಟ್ಟು 3,560 ಕೋಟಿ ನಷ್ಟವಾಗಿದ್ದು, ಮಳೆಯಿಂದಾಗಿ ಮೂಲಸೌಕರ್ಯಗಳಿಗೂ ಹಾನಿಯಾಗಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ಮನವರಿಕೆ ಮಾಡಿದ್ದೇವೆ.
ರಾಜ್ಯ ಸರ್ಕಾರವೂ ಬೆಳೆ ಹಾನಿ ಪರಿಹಾರ ಕೊಡುತ್ತಿದ್ದು, ರೈತರಿಗೆ ಕೊಡಬೇಕಾದ ಪರಿಹಾರ 2,800 ಕೋಟಿ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆಯೂ ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಲಾಗಿದೆ.ಮಹದಾಯಿ ಯೋಜನೆ ವಿಚಾರ ಕೇಂದ್ರ ಸರ್ಕಾರದ ಮುಂದೆ ಇದ್ದು, ಯೋಜನೆ ಜಾರಿಗೆ ಅವರೇ ಅನುಮತಿ ನೀಡಬೇಕು. ಹೀಗಾಗಿ ಆ ಬಗ್ಗೆಯೂ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದೇವೆ. ಕುಡಿಯುವ ನೀರಿನ ಯೋಜನೆ ಕೂಡಲೇ ಮಾಡಿ ಅಂತಾ ಹೇಳಲಾಗಿದೆ.
ಜೊತೆಗೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧವೂ ಪ್ರಧಾನಿಗೆ ಮನವಿ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.





