ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿದ್ದ ತೀವ್ರ ಕುತೂಹಲ ಹಾಗೂ ಸಸ್ಪೆನ್ಸ್ಗೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ
ನೀಡುವುದಾಗಿ ಸಚಿವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ತಮ್ಮ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಹಮ್ಮಿಕೊಂಡಿದ್ದ ಸಚಿವರ ಉಪಾಹಾರ ಕೂಟದ ಚರ್ಚೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಇಂದು ಮಧ್ಯಾಹ್ನ 3 ಗಂಟೆಗೆ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿದ್ದೇನೆ,” ಎಂದು ತಿಳಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ನಾಯಕತ್ವದ ಶಕೆ ಆರಂಭವಾಗಲಿದೆ.
ನಾನು ಮಧ್ಯಾಹ್ನ ಲೋಕಭವನಕ್ಕೆ (ರಾಜ್ಭವನ) ತೆರಳಿ ರಾಜೀನಾಮೆ ಸಲ್ಲಿಸುತ್ತೇನೆ. ಎಂದು ಹೇಳಿರುವುದಾಗಿ ಅವರ ಆಪ್ತ ಮೂಲಗಳು ತಿಳಿಸಿವೆ.
‘ಕಾವೇರಿ’ ನಿವಾಸದಲ್ಲಿ ನಡೆದ ಈ ಅಂತಿಮ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಹೈಕಮಾಂಡ್ ತೀರ್ಮಾನ ಹಾಗೂ ರಾಜೀನಾಮೆ ನೀಡುತ್ತಿರುವ ಹಿನ್ನೆಲೆಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದೆ.















