ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಉಂಟಾದ ಗುಡ್ಡ ಕುಸಿತ ಹಾಗೂ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸ್ಥಳೀಯರ ಜೊತೆ ಚರ್ಚೆ ಜನರ ಸಂಕಷ್ಟ ಅಲಿಸಿ ಸ್ಥಳದಲ್ಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಪರಿಹಾರ ಸೂಚಿಸಿದರು. ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು ಮತ್ತು
ಸ್ಥಳೀಯರ ಜೊತೆ ಚರ್ಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.ಕುಶಾಲನಗರ ತಾಲ್ಲೂಕಿನ ಮಾದಾಪಟ್ಟಣದಲ್ಲಿ ಮನೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಅಲ್ಲಿನ ಕುಟುಂಬದವರಿಗೆ ಧೈರ್ಯ ತುಂಬಿದರು. ಮನೆ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಸಿಎಂ ತಿಳಿಸಿದರು.
ಬಳಿಕ ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು
ಕಸ್ತೂರಿ ರಂಗನ್ ವರದಿಯ ಕುರಿತು ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಬಳಿ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಲ್ಲಿ.ಒಟ್ಟು 746 ಕೋಟಿ ರೂಪಾಯಿ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ಅವರು ವಿವರಿಸಿದರು.
ಭೂಕುಸಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕೆ ಜಿಎಸ್ ಐ ವರದಿ ನೋಡಿ ನಂತರ ತೀರ್ಮಾನಿಸಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಎ. ಎಸ್. ಪೊನ್ನಣ್ಣ, ಡಾ. ಮಂಥರ್ ಗೌಡ, ಮಾಜಿ ಸಚಿವ ಎಂ.ಸಿ. ನಾಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಶಾಸಕಿ ವೀಣಾ
ಅಚ್ಚಯ್ಯ, ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ವೆಂಕಟ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜ್ ಮತ್ತಿತರರು ಉಪಸ್ಥಿತರಿದ್ದರು.