ಸುಳ್ಯ:ರಾಜ್ಯದ ಹಲವು ಭಾಗಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.ಮಂಜು,ಒಣ ಹವೆ ಹಾಗೂ ಶೀತಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ಚಳಿಯ ಹಿಡಿತದಲ್ಲಿದೆ.
ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳಿಂದ
ಕನಿಷ್ಠ ತಾಪಮಾನ ಸುಮಾರು 14 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಿದೆ. ಹಗಲಿನ ವೇಳೆಯಲ್ಲಿಯೂ ತಾಪಮಾನ ಕುಸಿತ ಕಂಡುಬಂದಿದ್ದು, ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ಕೆಲವು ಭಾಗಗಳಲ್ಲಿ ತುಂತುರು ಮಳೆಯೂ ಸುರಿಯುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ.ಜನವರಿ 14ರವರೆಗೆ ಕೆಲವು ಭಾಗಗಳಲ್ಲಿ ಮಂಜು ಮತ್ತು ಶೀತಗಾಳಿ ಬೀಸುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿಯೂ ಒಣ ಹವೆಯಿರಲಿದ್ದು ಉತ್ತಮ ಚಳಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಚಳಿ ಮುಂದುವರಿಯುವ ನಿರೀಕ್ಷೆಯಿದೆ.












