ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಬಿಪಿಎಲ್ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ ಹತ್ತು ಕೆ.ಜಿ. ಅಕ್ಕಿ, ಮನೆಯ ಯಜಮಾನಿಗೆ ಮಾಸಿಕ 2,000 ನೆರವು ನೀಡುವುದು ಸೇರಿದಂತೆ ಎಲ್ಲ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ದರಾಮಯ್ಯ ನೇತೃತ್ವದ ನೂತನ ಸಂಪುಟ ಶನಿವಾರ ತಾತ್ವಿಕ ಅನುಮೋದನೆ ನೀಡಿದೆ.ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ
ಕೈಗೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಎಲ್ಲ ಸದಸ್ಯರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತೀರ್ಮಾನಗಳನ್ನು ಪ್ರಕಟಿಸಿದರು.
ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ 3,000 ಮತ್ತು ಡಿಪ್ಲೊಮಾ ಪದವೀಧರರಿಗೆ ತಿಂಗಳಿಗೆ 1,500 ಭತ್ಯೆ ನೀಡಲಾಗುವುದು. ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡಲಾಗುವುದು ಎಂದರು.
ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ವರ್ಷಕ್ಕೆ 50,000 ಕೋಟಿ ಅಗತ್ಯವಿದೆ. ತೆರಿಗೆ ಸಂಗ್ರಹದಲ್ಲಿ ಬಿಗಿ ಕ್ರಮ ಮತ್ತು ಹೊಸ ಆದಾಯ ಮೂಲಗಳಿಂದ ಈ ಮೊತ್ತ ಸಂಗ್ರಹಿಸಲು ಸಾಧ್ಯವಿದೆ. ಎಷ್ಟೇ ಕಷ್ಟವಾದರೂ ಗ್ಯಾರಂಟಿಗಳ ಅನುಷ್ಠಾನದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಈ ಎಲ್ಲ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾರ್ಗಸೂಚಿಗಳ ಕುರಿತು ಸಂಪುಟದ ಮುಂದಿನ ಸಭೆಯಲ್ಲಿ ನಿರ್ಧರಿಸಲಾಗುವುದು. ಅಷ್ಟರೊಳಗೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಎಲ್ಲ ಇಂದಿರಾ ಕ್ಯಾಂಟೀನ್ ಗಳನ್ನು ಪುನರಾರಂಭ ಮಾಡಲಾಗುವುದು. ಆ ಬಗ್ಗೆಯೂ ಅಗತ್ಯ ಮಾಹಿತಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.