ಸುಳ್ಯ:ಯಾವುದೇ ಸರಕಾರಗಳು ಮಾಡದಂತಹಾ ಜನಪರ ಕೆಲಸಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಮಾಡಿದೆ. ಸರಕಾರದ ಈ ಸಾಧನೆಗಳನ್ನು ಜನರಿಗೆ ತಲುಪಿಸುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯನ್ನು ಕಾರ್ಯಕರ್ತರು ಆತ್ಮ ವಿಶ್ವಾಸದಿಂದ ಎದುರಿಸಬೇಕು
ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕರೆ ನೀಡಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು
ಮಾತನಾಡಿದರು. ಕೇವಲ ಆರು ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ ಸರಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಬಿಜೆಪಿ ಜನರಿಗೆ ಏನು ನೀಡಿದೆ ಎಂದು ಪ್ರಶ್ನಿಸಿದ ಅವರು ಕೇಂದ್ರ ಸರಕಾರವು ರಾಜ್ಯಕ್ಕೆ ಅರ್ಹವಾದ ಅನುದಾನವನ್ನು ನೀಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ಪ್ರಾಕೃತಿಕ ವಿಕೋಪ, 15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಅರ್ಜವಾದ ಅನುದಾನ ಕೇಂದ್ರ ಸರಕಾರದಿಂದ ಬಂದಿಲ್ಲ.

ಇದರಿಂದ ಜನಕ್ಷೇಮ ಕಾರ್ಯಗಳಿಗೆ, ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದ ಅವರು ಬಿಜೆಪಿ ಡಬಲ್ ಎಂಜಿನ್ ಸರಕಾರಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಕಡೆಗಣಿಸಿದೆ. ಸುಳ್ಯ ತಾಲೂಕಿನ ಅಭಿವೃದ್ಧಿಯ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿತ್ತು ಎಂದು ಹೇಳಿದರು. ಹಿಂದಿನ ಸರಕಾರಗಳು ಸುಳ್ಯ ತಾಲೂಕಿನ ಅಭಿವೃದ್ಧಿ ಬಗ್ಗೆ ಯಾವುದೇ ಆಸಕ್ತಿ ವಹಿಸಿದಂತೆ ಕಂಡು ಬರಲಿಲ್ಲ. ಇಲ್ಲಿ ಅಭಿವೃದ್ಧಿಗೆ ಅನುದಾನಗಳ ಮಹಾಪೂರವೇ ಬೇಕಾಗಬಹುದು ಎಂದು ಹೇಳಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಕಾಂಗ್ರೆಸ್ ಮುಖಂಡರಾದ ಡಾ.ಕೆ.ಇ.ರಾಧಾಕೃಷ್ಣ, ಡಾ.ಬಿ.ರಘು ಮತ್ತಿತರರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ ವಂದಿಸಿದರು. ಅಶೋಕ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.












