ಸುಳ್ಯ:ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಸೋಲಿನ ನಂತರದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿ 17 ಮಂದಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದನ್ನು ಕೆಪಿಸಿಸಿ ವಾಪಸ್ಸು ಪಡೆದಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಜಿ.ಕೃಷ್ಣಪ್ಪ ತಿಳಿಸಿದ್ದಾರೆ. ಎಲ್ಲಾ 17 ಮಂದಿಯ ಉಚ್ಚಾಟನೆ ಆದೇಶವನ್ನು ಕೆಪಿಸಿಸಿ
ಹಿಂಪಡೆದಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಅವರ ಜೊತೆ ಮಾತುಕತೆ ನಡೆಸಲಾಗಿದ್ದು ಉಚ್ಚಾಟನೆ ಆದೇಶ ವಾಪಾಸ್ ಪಡೆಯಲಾಗಿದೆ. ಕೆಲವು ಮುಖಂಡರಿಗೆ ಶೋಕಾಸ್ ನೀಡಿರುವುದನ್ನು ಕೈ ಬಿಡಲಾಗಿದೆ ಎಂದು ಜಿ.ಕೃಷ್ಣಪ್ಪ ಅವರು ‘ಸುಳ್ಯ ಮಿರರ್’ಗೆ ತಿಳಿಸಿದ್ದಾರೆ.
ಏನಿದು ಘಟನೆ:
ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಸೋಲಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ.ಕೃಷ್ಣಪ್ಪ ಅವರ ದೂರಿನ ಹಿನ್ನಲೆಯಲ್ಲಿ ಕೆಪಿಸಿಸಿ 17 ಮಂದಿಯನ್ನು ಉಚ್ಚಾಟನೆ ಮಾಡಿತ್ತು. ಅಭ್ಯರ್ಥಿ ಘೋಷಣೆ ಆದ ಬಳಿಕ ಮತ್ತು ಚುನಾವಣಾ ಸಂದರ್ಭದಲ್ಲಿ ಕೆಲವು ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ, ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಪ್ರಯತ್ನ ನಡೆಸಿಲ್ಲ ಎಂದು ಅಭ್ಯರ್ಥಿ ಜಿ.ಕೃಷ್ಣಪ್ಪ ಅವರು ಕೆಪಿಸಿಸಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಸುಳ್ಯ ಹಾಗೂ ಕಡಬ ಬ್ಲಾಕ್ನ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ 17 ಮಂದಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಕೆಪಿಸಿಸಿ ಆದೇಶ ಮಾಡಿತ್ತು. ಕೆಲವು ಮುಖಂಡರಿಗೆ ಶೊಕಾಸ್ ನೋಟೀಸ್ ಜಾರಿ ಮಾಡಿತ್ತು. ಇದು ಸುಳ್ಯ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿಸಿತ್ತು. ಬಳಿಕ ಸಭೆ ನಡೆಸಿ ಒಗ್ಗಟ್ಟಿನ ಮಂತ್ರ ಜಪಿಸಿ ಎಲ್ಲರೂ ಒಟ್ಟಾಗಿ ಪಕ್ಷಕ್ಕಾಗಿ ದುಡಿಯಲು, ಉಚ್ಚಾಟನೆ ವಾಪಾಸ್ ಪಡೆಯಲು ನಿರ್ಧರಿಸಲಾಗಿತ್ತು. ಇದೀಗ ಉಚ್ಚಾಟನೆ ಆದೇಶ ಅಧಿಕೃತವಾಗಿ ವಾಪಾಸ್ ಪಡೆಯಲಾಗಿದೆ ಎಂದು ಜಿ.ಕೃಷ್ಣಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.