ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ಅ.23ರ ವೇಳೆಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಪೂರ್ವ– ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ
ವಾಯುಭಾರ ಕುಸಿತ ಉಂಟಾಗಿದೆ. ಇದು ಪಶ್ಚಿಮ– ವಾಯುವ್ಯ ದಿಕ್ಕಿನೆಡೆಗೆ ಚಲಿಸುವ ಸಾಧ್ಯತೆ ಇದೆ. ಅ.23ರಂದು ಪೂರ್ವ– ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ. ನಂತರ ಚಂಡಮಾರುತವು ವಾಯುವ್ಯಕ್ಕೆ ಚಲಿಸುವ ಸಾಧ್ಯತೆ ಇದ್ದು, ಅ.24ರ ಮುಂಜಾನೆ ಒಡಿಶಾ– ಪಶ್ಚಿಮ ಬಂಗಾಳ ಕರಾವಳಿಯಿಂದ ವಾಯುವ್ಯ ಬಂಗಾಳಕೊಲ್ಲಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.