ಸುಳ್ಯ: ಸುಳ್ಯ ತಾಲೂಕಿನ ವಿವಿಧ ಮತಗಟ್ಟೆಗಳಿಗೆ ಹಾಗೂ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಹಾಗೂ ಇತರೆ ಅಧಿಕಾರಿಗಳು ಏ.19ರಂದು ಭೇಟಿ ನೀಡಿದರು. ನಕ್ಸಲ್ ಬಾದಿತ ಹಾಗೂ
ಸೂಕ್ಷ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಡಪ್ಪಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು
ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಧೈರ್ಯ ತುಂಬಿದರು. ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ
ಭಾಗವಹಿಸುವಂತೆ ಸೂಚಿಸಿದರು. ಸಂಪಾಜೆ ಚೆಕ್ ಪೋಸ್ಟ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಚೆಕ್ ಪೋಸ್ಟ್ ತಪಾಸಣ ಕಾರ್ಯವನ್ನು ಪರಿಶೀಲಿಸಿದರು. ಕಲ್ಲುಗುಂಡಿ, ಜಾಲ್ಸೂರು ಸೇರಿ ವಿವಿಧ ಚೆಕ್ಪೋಸ್ಟ್ ಹಾಗೂ ಮತಗಟ್ಟೆಗಳಿಗೆ ಭೇಟಿ ನೀಡಿದರು.
ತಹಶೀಲ್ದಾರ್ ಜಿ.ಮಂಜುನಾಥ್, ಪೊಲೀಸ್ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸುಳ್ಯ ಆರಕ್ಷಕ ಉಪನಿರೀಕ್ಷಕ ಈರಯ್ಯ ಡಿ.ಎನ್. ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.