ಸುಳ್ಯ:ದೇವರಾಜ ಅರಸು ಅವರು ಶಿಕ್ಷಣಕ್ಕೆ ಮತ್ತು ಕೃಷಿಕರಿಗೆ ನೀಡಿದ ಕೊಡುಗೆ ಅನನ್ಯವಾದುದು. ದೇಶದ ಪ್ರತಿಯೊಬ್ಬ ವಿದ್ಯಾರ್ಥಿಗಳು ಉತ್ತಮ ಪ್ರಜೆಯನ್ನಾಗಿ ಮಾಡಲು ಶಿಕ್ಷಣ ಅತೀ ಅಗತ್ಯ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು.
ಅವರು ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು 111ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅರಸು ಅವರು ಬಡವರ ಬಗ್ಗೆ ಕಾಳಜಿ ಇದ್ದ ನಾಯಕ. ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಬೇಕು ಎಂದು ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಿದರು. ಉಳುವವನೇ ಭೂಮಿಯ ಒಡೆಯ ಕಾನೂನು ತಂದು ಸಾವಿರಾರು ಬಡವರನ್ನು ಭೂಮಿಯ ಒಡೆಯರನ್ನಾಗಿ ಮಾಡಿದರು. ಇಂತಹ ಪ್ರಗತಿಪರ ಯೋಜನೆಗಳಿಂದ ಅರಸು ಅವರ ಕನಸುಗಳನ್ನು ಸಾಕಾರಗೊಳಿಸುವ ಕೆಲಸ ಆಗಬೇಕೆಂದು ಹೇಳಿದರು.
.ಸಮಾರಂಭದ ಅಧ್ಯಕ್ಷತೆಯನ್ನು ತಹಸೀಲ್ದಾರ್ ಮಂಜುಳಾ. ಎಂ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ನ.ಪಂ.ಮುಖ್ಯಾಧಿಕಾರಿ ಬಸವರಾಜ್ ಹೆಚ್.ಆರ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ 2025-26 ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ನಡೆದ ಚಿತ್ರಕಲೆ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಾ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ನಿಲಯ ಮೇಲ್ವಿಚಾರಕಿ ಸುಹಾಸಿನಿ ವಂದಿಸಿದರು. ನಿಲಯ ಮೇಲ್ವಿಚಾರಕರಾದ ಮಂಜುನಾಥ. ಎಸ್.ಎಸ್ ಮತ್ತು ಗೀತಾ ಎಸ್.ಕೆ. ನಿರೂಪಿಸಿದರು.







