ಧರ್ಮಸ್ಥಳ: ಸತ್ಯ, ಧರ್ಮ, ನ್ಯಾಯ ಮತ್ತು ನೀತಿಯ ಮಾರ್ಗದಲ್ಲಿ ನಡೆದು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಹೃದಯ ವೈಶಾಲ್ಯದಿಂದ ಕಾಯಕದ ಮೂಲಕ ತಾನು ಸಂತೋಷದಿಂದ ನಿತ್ಯವೂ, ನಿರಂತರವೂ ಶ್ರೀ ಮಂಜುನಾಥ ಸ್ವಾಮಿಯ ಸೇವೆ ಮಾಡುತ್ತಿರುವುದಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಮಂಗಳವಾರ ಲಕ್ಷದೀಪೋತ್ಸವ ಸಂದರ್ಭದಲ್ಲಿ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಶ್ರದ್ಧಾ ಭಕ್ತಿಯಿಂದ ಬಂದ
೨೫ ಸಾವಿರಕ್ಕೂ ಮಿಕ್ಕಿದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.
ತಮಗೆ ಸುಖ-ದುಃಖ ಮತ್ತು ಪಾಪ – ಪುಣ್ಯದ ಭಯ ಹಾಗೂ ಚಿಂತೆ ಇಲ್ಲ. ಎರಡನ್ನೂ ತಾವು ಸಮಾನವಾಗಿ ಸ್ವೀಕರಿಸಿ ಶ್ರೀ ಸ್ವಾಮಿಯ ಸನ್ನಿಧಿಗೆ ಅರ್ಪಿಸಿ ನಿಶ್ಚಿಂತೆಯಿಂದ ಇರುತ್ತೇನೆ. ಲಕ್ಷಾಂತರ ಮಂದಿ ಭಕ್ತರ ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ ಮತ್ತು ಗೌರವವೇ ತಮಗೆ ಶ್ರೀರಕ್ಷೆಯಾಗಿದೆ ಎಂದರು. 2025ರ ಜನವರಿ ೭ ಮತ್ತು ೮ ರಂದು ಮಾನ್ಯ ಉಪರಾಷ್ಟ್ರಪತಿಗಳನ್ನು ಧರ್ಮಸ್ಥಳಕ್ಕೆ ಆಹ್ವಾನಿಸಿದ್ದು ನೂತನ ಸರತಿ ಸಾಲಿನ (ಕ್ಯೂ ಕಾಂಪ್ಲೆಕ್ಸ್) ಕಟ್ಟಡವನ್ನು ಉದ್ಘಾಟಿಸುವರು. ಅಂದು ೬೦ ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಗುವುದು.
ಉಡುಪಿಯಲ್ಲಿ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದು ಸದ್ಯದಲ್ಲಿಯೇ ಉದ್ಘಾಟಿಸಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮಾಡಿದರು.
ಹೇಮಾವತಿ ವೀ. ಹೆಗ್ಗಡೆ, ಅನಿತಾ ಸುರೇಂದ್ರಕುಮಾರ್, ಡಿ. ಹರ್ಷೇಂದ್ರ ಕುಮಾರ್, ಉಜಿರೆಯ ಶರತ್ಕೃಷ್ಣ ಪಡ್ವೆಟ್ನಾಯ, ಸೋನಿಯಾ ಯಶೋವರ್ಮ, ಬೆಳ್ತಂಗಡಿ ರೋಟರಿಕ್ಲಬ್ ಅಧ್ಯಕ್ಷ ಪೂರನ್ವರ್ಮ ಉಪಸ್ಥಿತರಿದ್ದರು.ಬೆಳ್ತಂಗಡಿಯ ವಕೀಲ ಬಿ.ಕೆ. ಧನಂಜಯ ರಾವ್ ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುರೇಂದ್ರ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.