ಧರ್ಮಾಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.ಸಂಜೆ 5ಗಂಟೆಗೆ ವಧೂ-ವರರನ್ನು ಭವ್ಯ ಮೆರವಣಿಗೆಯಲ್ಲಿ ದೇವಸ್ಥಾನದ ಬಳಿಯಿಂದ
ಅಮೃತವರ್ಷಿಣಿ ಸಭಾಭವನಕ್ಕೆ ಕರೆದುಕೊಂಡು ಹೋಗಲಾಯಿತು.
ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಗಣ್ಯ ಅತಿಥಿಗಳು ಮಂಗಳಸೂತ್ರ ವಿತರಿಸಿದರು.
ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವೇದಘೋಷ, ಮಂಗಳವಾದ್ಯ, ಹಾರ ವಿನಿಮಯ, ಮಂತ್ರಾಕ್ಷತೆಯೊಂದಿಗೆ ವಧುವಿಗೆ ಮಂಗಳಸೂತ್ರ ಧಾರಣೆ ಮಾಡಲಾಯಿತು.
ಸುಶ್ರಾವ್ಯ ಶೋಭಾನೆ ಹಾಡಗಳೊಂದಿಗೆ ವಧೂ-ವರರಿಗೆ ಆರತಿ ಹಾಗೂ ಮಂಗಲದ್ರವ್ಯಗಳನ್ನು ವಿತರಣೆ ಮಾಡಲಾಯಿತು.
ದಾಂಪತ್ಯ ದೀಕ್ಷೆಯ ಬಳಿಕ ನೂತನ ದಂಪತಿಗಳಿಗೆ ಧರ್ಮಸ್ಥಳದ

ವತಿಯಿಂದ ಉಡುಗೊರೆ ನೀಡಿ ಶುಭ ಹಾರೈಸಲಾಯಿತು.
ಬಳಿಕ ನೂತನ ದಂಪತಿಗಳು ದೇವರ ದರ್ಶನ ಮಾಡಿ, ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ಊರಿಗೆ ಪ್ರಯಾಣಿಸಿದರು.
ಸಭಾ ಕಾರ್ಯಕ್ರಮ :
ಸಮಾರಂಭದ ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನೂತನ ದಂಪತಿಗಳು ಪರಸ್ಪರ ನಂಬಿಕೆ, ಪ್ರೀತಿ-ವಿಶ್ವಾಸದೊಂದಿಗೆ ಹೊಂದಾಣಿಕೆಯಿಂದ ಸಾರ್ಥಕ ಜೀವನ ನಡೆಸಬೇಕು ಎಂದು ಸಲಹೆ ನೀಡಿ ಆಶೀರ್ವದಿಸಿದರು.

ಶಾಸಕ ಹರೀಶ್ ಪೂಂಜ,ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್,
ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಶುಭ ಹಾರೈಸಿದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಶರ್ಮಿಳಾ ವೇದಿಕೆಯಲ್ಲಿ ಇದ್ದರು.ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್ ಸ್ವಾಗತಿಸಿದರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಧನ್ಯವಾದವಿತ್ತರು.ಸಂಪತ್ ಕುಮಾರ್ ರೈ ಮತ್ತು ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.













