ಉಜಿರೆ: ಇಂದು ಎಲ್ಲಾ ಸರ್ಕಾರಿ ಶಾಲೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಆದುದರಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಅಲ್ಲಿ ಸಿಗುವ ಅವಕಾಶಗಳ ಸದುಪಯೋಗ ಪಡೆದು ಮಕ್ಕಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಉಜಿರೆಯ ಸಮಗ್ರ ಘನತ್ಯಾಜ್ಯ ನಿರ್ವಹಣಾಕೇಂದ್ರಕ್ಕೆ ಸಾಗಾಟವಾಹನ ಮತ್ತು ಯಂತ್ರೋಪಕರಣಗಳ ವಿತರಣೆ ಮತ್ತು ೫೦೭ ಶಾಲೆಗಳಿಗೆ ೪,೦೪೪ ಜೊತೆ ಡೆಸ್ಕ್-ಬೆಂಚುಗಳ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಆನಂದ, ಕೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ದ.ಕ. ಜಿಲ್ಲಾ ಉಪನಿರ್ದೇಶಕ ವೆಂಕಟೇಶ್ ಸುಬ್ರಾಯ ಪಟಗಾರ್ ಮಾತನಾಡಿದರು.
ಹೇಮಾವತಿ ವೀ. ಹೆಗ್ಗಡೆ, ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಪ್ರಭಾರ ಕ್ಷೇತ್ರಶಿಕ್ಷಣಾಧಿಕಾರಿ ವೆಂಕಟೇಶ ತುಳುಪುಳೆ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ ಉಪಸ್ಥಿತರಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ಶಿವಾನಂದ ಆಚಾರ್ಯ ಧನ್ಯವಾದವಿತ್ತರು.