ಮಂಗಳೂರು:ಅನ್ನಭಾಗ್ಯಕ್ಕೆ ಸಂಬಂಧಿಸಿದಂತೆ ಪ್ರತೀ ತಾಲೂಕಿನ ನ್ಯಾಯ ಬೆಲೆ ಅಂಗಡಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ತಿಂಗಳಿಗೆ 2 ಬಾರಿ ಭೇಟಿ ನೀಡಬೇಕು.ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರು ಕಡ್ಡಾಯವಾಗಿ ಇಕೆವೈಸಿಯನ್ನು ಮಾಡುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಮಂಗಳೂರು ವಿಭಾಗಕ್ಕೆ 62, ಪುತ್ತೂರು ವಿಭಾಗಕ್ಕೆ 40 ಬಸ್ಸುಗಳು ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಕೊರೊನಾ ಸಂದರ್ಭದಲ್ಲಿ ಸ್ಥಗಿತಗೊಳಿಸಲಾದ ಮಾರ್ಗಗಳನ್ನು ಆದ್ಯತೆ ಮೇರೆಗೆ ಪುನಃ ಕಾರ್ಯಾಚರಿಸುವಂತೆ ಸೂಚಿಸಲಾಯಿತು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮರಣ ನಂತರ ಸಹಾಯಧನ ಜಮೆಯಾಗಿರುವ ಫಲಾನುಭವಿಗಳ ಕುರಿತು ಶೇ.100 ರಷ್ಟು ಪರಿಶೀಲನೆ ನಡೆಸಲಾಗಿರುತ್ತದೆ. ಗೃಹಜ್ಯೋತಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಗೃಹಜ್ಯೋತಿ ಸಮೀಕ್ಷೆಯನ್ನು ಶೇ.87ರಷ್ಟು ಪೂರ್ಣಗೊಳಿಸಲಾಗಿರುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ, ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಿಶ್ವನಾಥ ಮುದಜ್ಜಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಕೆ.ಎಸ್. ಸುಷ್ಮಾ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜಾ, ನಾರಾಯಣ ನಾಯಕ್, ಸುರೇಖಾ ಚಂದ್ರಹಾಸ್, ಸದಸ್ಯರಾದ ಆಲಿಸ್ಟನ್ ಕ್ಲೈವ್ ಡಿಕುನ್ಹಾ, ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿಎ, ಶಾಹುಲ್ ಹಮೀದ್, ಉಮಾನಾಥ್ ಶೆಟ್ಟಿ, ಪದ್ಮನಾಭ ಸಾಲ್ಯಾನ್, ಸುಧೀರ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.








































