ಮಂಗಳೂರು: ಬಂಟ್ವಾಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿದಂತೆ ಜಿಲ್ಲೆಯಲ್ಲಿ ಇನ್ನು ಮುಂದೆ ಈ ರೀತಿಯ ಯಾವುದೇ ಪ್ರಕರಣಗಳು ಮರುಕಳಿಸಬಾರದು, ಈ ದಿಸೆಯಲ್ಲಿ ಗುಡ್ಡದ ಸಮೀಪದ ಅಪಾಯಕಾರಿ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಕಾಳಜಿ ಕೇಂದ್ರಗಳು ಅಥವಾ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಂಬಂಧಿಸಿದ
ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಅವರು ಜು.7ರಂದು ರಾತ್ರಿ ಮಂಗಳೂರು ಮಹಾನಗರ ಪಾಲಿಕೆಯ ಕಮಾಂಡ್ ಕಂಟ್ರೋಲ್ ರೂಂ ನಲ್ಲಿ ವ್ಯಾಪಕ ಮಳೆ, ಪ್ರವಾಹ ಹಾಗೂ ಕೈಗೊಂಡಿರುವ ಪ್ರವಾಹದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಇಂದು ಮಳೆಯ ಪ್ರಮಾಣ ಕಡಿಮೆಯಾಗಿದೆ, ಆದರೆ ಗುಡ್ಡ ಕುಸಿತ ಪ್ರಕರಣಗಳು ವರದಿಯಾಗುವ ಸಾಧ್ಯತೆಗಳಿವೆ, ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಬೀಳುವ ಸ್ಥಿತಿ, ಬಿರುಕು ಬಿಟ್ಟ ಸ್ಥಿತಿಗಳಲ್ಲಿರುವ ಸೇತುವೆಗಳನ್ನೊಮ್ಮೆ ಪರಿಶೀಲಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಹಕ ಎಂಜಿನಿಯರ್ರಿಗೆ ಸೂಚನೆ ನೀಡಿದ ಅವರು, ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಅಧಿಕಾರಿಗಳಿಂದ ಯಾವುದೇ ಲೋಪ ಆಗಬಾರದು, ಆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು, ಯಾವುದೇ ರೀತಿಯ ಪ್ರಾಕೃತಿಕ ಅನಾಹುತಗಳು ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಗೆ ಸಿದ್ದವಿರಬೇಕು ಎಂದರು.
ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಈ ಬಗ್ಗೆ ಅವರಿಗೆ ಸೂಕ್ತ ಮಾಹಿತಿ ನೀಡಿರಬೇಕು, ಅಧಿಕ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವುದು ಸೇರಿದಂತೆ ಸ್ಥಳೀಯವಾಗಿ ಕೈಗೊಳ್ಳಬೇಕಾದ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳು ಸೂಕ್ತವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.ವಿಕೋಪಗಳನ್ನು ಸೂಕ್ತವಾಗಿ ನಿಭಾಯಿಸಲು ತಾಲೂಕು ಮಟ್ಟದಲ್ಲಿ ನಿಯೋಜಿಸಲಾದ ನೋಡಲ್ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು ಹಾಗೂ ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದರು.
ವಿಧಾನ ಪರಿಷತ್ ಶಾಸಕ ಹರಿಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಮಾಣಿಕ್ಯ, ಸೇರಿದಂತೆ ಲೋಕೋಪಯೋಗಿ, ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.
ಶನಿವಾರ ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಚಿವರು ಭಾಗವಹಿಸಲಿದ್ದಾರೆ.