ಸುಳ್ಯ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜ.23 ರಂದು ಸುಳ್ಯದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಜ.23ರಂದು ಪೂ.11ರಿಂದ 3 ಗಂಟೆಯ ತನಕ ಸಚಿವರು ಸುಳ್ಯದಲ್ಲಿ ಜನತಾದರ್ಶನ ನಡೆಸಲಿದ್ದಾರೆ. ಇದಕ್ಕೆ ಅಗತ್ಯ ಸಿದ್ಧತೆ ನಡೆಸಲು ಸಚಿವರ ಆಪ್ತ ಕಾರ್ಯದರ್ಶಿ ಸೂಚಿಸಿದ್ದಾರೆ.ತಾಲೂಕು ಮಟ್ಟದಲ್ಲಿ ಜನತಾ ದರ್ಶನ
ನಡೆಸುವುದಾಗಿ ಸಚಿವರು ಕಳೆದ ತಿಂಗಳು ಘೋಷಿಸಿದ್ದರು. ತಾಲೂಕು ಮಟ್ಟದ ಪ್ರಥಮ ಜನತಾ ದರ್ಶನ ಸುಳ್ಯದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಪ್ರಥಮ ಬಾರಿಗೆ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪ್ರಥಮ ಬಾರಿಗೆ ಸುಳ್ಯವನ್ನು ಆಯ್ಕೆ ಮಾಡಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಪ್ರಯೋಜನ ಪಡೆದು ಕೊಳ್ಳಬೇಕು ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ.ಕೃಷ್ಣಪ್ಪ ಅವರು ವಿನಂತಿಸಿದ್ದಾರೆ.
ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಪ್ರಥಮ ಬಾರಿಗೆ ಸುಳ್ಯಕ್ಕೆ ಆಗಮಿಸುತ್ತಿದ್ದಾರೆ.










