ಮಂಗಳೂರು: ಲೋಕಸಭಾ ಚುನಾವಣೆ ಘೋಷಣೆಗೆ ಕ್ಷಣ ಗಣನೆ ಆರಂಭವಾಗಿರುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಪಕ್ಷಗಳ ಅಭ್ಯರ್ಥಿ ಆಯ್ಕೆ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದರೆ, ಕಾಂಗ್ರೆಸ್ ಎರಡು ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಎರಡೂ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳ ಘೋಷಣೆ ಆಗಿಲ್ಲ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಆಯ್ಕೆಯು ಟಿ20 ಕ್ರಿಕೆಟ್ ಮ್ಯಾಚ್ನಂತೆ ಭಾರೀ ಕುತೂಹಲ ಮೂಡಿಸಿದೆ. ಮೂರು ಬಾರಿಯ
ಸಂಸದ, ಮಾಜಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡುತ್ತಾರಾ ಅಥವಾ ಹೊಸ ಮುಖವನ್ನು ಕಣಕ್ಕೆ ಇಳಿಸುತ್ತಾರಾ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಯ ಬಗ್ಗೆ ಚರ್ಚೆಯಾಗಿದೆ. ಎರಡನೇ ಹಂತದ ಬಿಜೆಪಿ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆ ಆಗುವ ಸಾಧ್ಯತೆ ಇದೆ. ಎರಡು

ರೀತಿಯ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದೆ. ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಮತ್ತೊಂದು ಅವಕಾಶ ನೀಡಬಹುದು ಎಂಬ ಸಾಧ್ಯತೆ ಒಂದೆಡೆಯಾದರೆ, ಈ ಸಲ ಕ್ಷೇತ್ರದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬಂದಿದೆ. ಬ್ರಿಜೇಶ್ ಚೌಟ, ಕಿಶೋರ್ ಕುಮಾರ್ ಬೊಟ್ಯಾಡಿ ಮತ್ತಿತರ ಯುವ ಮುಖಂಡರ ಹೆಸರು ಕೇಳಿ ಬಂದಿದೆ. ಪಕ್ಷದ ವರಿಷ್ಠರು ಯಾವ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧನಾಗಿರುತ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಹೊಸಬರಿಗೆ ಅವಕಾಶ ನೀಡಿದರೆ ಜಿಲ್ಲೆಯಲ್ಲಿದೆ ಪಕ್ಷದಲ್ಲಿ ಇರುವ ಕೆಲವು ಅಸಮಾಧಾನಕ್ಕೆ, ಬಂಡಾಯಕ್ಕೆ ತೆರೆ ಎಳೆಯಬಹುದು ಎಂಬುದು ವರಿಷ್ಠರ ಲೆಕ್ಕಾಚಾರ.

ಇನ್ನು ಕಾಂಗ್ರೆಸ್ ಪಾಳಯದಲ್ಲಿಯೂ ಅಭ್ಯರ್ಥಿ ಆಯ್ಕೆಯ ಬಗ್ಗೆ ಸಾಕಷ್ಟು ಚರ್ಚೆಗಳು, ಕುತೂಹಲ ಇದೆ. ಹಿರಿಯ ಮುಖಂಡರಾರ ವಿನಯಕುಮಾರ್ ಸೊರಕೆ, ರಮಾನಾಥ ರೈ, ಪದ್ಮರಾಜ್ ಮತ್ತಿತರ ಹೆಸರುಗಳು ಕೇಳಿ ಬಂದಿದೆ. ಈ ಮೂರು ಹೆಸರುಗಳು ರೇಸ್ನಲ್ಲಿದೆ.
ಇನ್ನುಳಿದಂತೆ ಉಡುಪಿ–ಚಿಕ್ಕಮಗಳೂರಿನಲ್ಲಿ ಹೊಸ ಮುಖಕ್ಕೆ ಮಣೆ ಹಾಕಿ ಬೆಂಗಳೂರು ಉತ್ತರದಲ್ಲಿ ಶೋಭಾ ಅವರನ್ನು ಅಭ್ಯರ್ಥಿಯಾಗಿ ಮಾಡುವ ಯೋಚನೆ ಬಿಜೆಪಿ ಮುಂದಿದೆ. ಉಡುಪಿ–ಚಿಕ್ಕಮಗಳೂರಿನಿಂದ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವ ಬಗ್ಗೆಯೂ ಪ್ರಸ್ತಾಪವಾಗಿದೆ ಎಂಬ ವರದಿಗಳಿವೆ.ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯೂ ಕುತೂಹಲ ಮೂಡಿದೆ.

ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರಕ್ಕೆ ಅಭ್ಯರ್ಥಿಯನ್ನಾಗಿ ಮಾಡಿದರೆ ಹಾಲಿ ಸಂಸದ ಡಿ.ವಿ.ಸದಾನಂದ ಗೌಡ ಅವರಿಗೆ ಬಿಜೆಪಿ ಸೀಟು ಕೈತಪ್ಪುವ ಸಾಧ್ಯತೆ ಇದೆ. ಇನ್ನು
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪರ್ಧಿಸುವ ಸಾಧ್ಯತೆ ಇದ್ದು. ಸಂಸದ ಪ್ರತಾಪ್ ಸಿಂಹ ಅವರ ಬದಲಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಅಖಾಡಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎಂಬ ವರದಿಗಳು ಇದೆ. ಒಟ್ಟಿನಲ್ಲಿ ಇಂದು ಅಥವಾ ನಾಳೆ ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ ಕೆಲವು ಕ್ಷೇತ್ರಗಳ ಅಭ್ಯರ್ಥಿ ಘೋಷಣೆಯಾಗಲಿದೆ. ಒಟ್ಟಿನಲ್ಲಿ ಹಲವು ಕ್ಷೇತ್ರಗಳು ಕುತೂಹಲ ಮೂಡಿಸಿದೆ.









