ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗಲಿದ್ದು, ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ
ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಗದಗ, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಹಾವೇರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಿದೆ.
ಕರಾವಳಿಯಲ್ಲಿ ಗಂಟೆಗೆ 40 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರ ಪ್ರದೇಶಕ್ಕೆ ತೆರಳದಂತೆ ಸೂಚಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ಭಾರೀ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಹಲವು ಕಡೆಗಳಲ್ಲಿ ನೀರು ನುಗ್ಗಿದ್ದು ಅಸ್ತವ್ಯಸ್ತಗೊಂಡಿದೆ.
ಸುಳ್ಯ ತಾಲೂಕಿನಲ್ಲಿಯೂ ಶನಿವಾರ ಹಗಲು ಹಾಗು ರಾತ್ರಿ ಉತ್ತಮ ಮಳೆಯಾಗಿದೆ. ಸುಳ್ಯ ನಗರದಲ್ಲಿ ಕಳೆದ 24 ಗಂಟೆಯಲ್ಲಿ 75 ಮಿ.ಮಿ.ಮಳೆಯಾಗಿದೆ.





