ನವದೆಹಲಿ:ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಹಾಗು ಹತ್ತಕ್ಕೂ ಹೆಚ್ಚು ಮಂದಿ ಸಚಿವರು ಲೋಕಭವನದಲ್ಲಿ ಬುಧವಾರ ಸಂಜೆ 4.05ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ. ನವದೆಹಲಿಯಲ್ಲಿ
ಎರಡು ದಿನ ನಡೆದ ಹಲವು ಸುತ್ತಿನ ಸಭೆಗಳ ಬಳಿಕ ಸಂಪುಟಕ್ಕೆ ಸೇರುವವರ ಪಟ್ಟಿಗೆ ಅಂತಿಮ ರೂಪ ನೀಡಲಾಯಿತು. ಹಲವು ಸುತ್ತಿನ ಸಮಾಲೋಚನೆ ನಡೆಸಿದ ಹೈಕಮಾಂಡ್, ಮೊದಲ ಹಂತದಲ್ಲಿ ಪ್ರಮಾಣವಚನ ಸ್ವೀಕರಿಸುವವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಸಚಿವರಾಗಲಿದ್ದಾರೆ. ಉಪಮುಖ್ಯಮಂತ್ರಿಯನ್ನಾಗಿ ಜಿ. ಪರಮೇಶ್ವರ ಅವರು ಅಧಿಕಾರ ವಹಿಸುವ ಸಾಧ್ಯತೆ ಇದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ದೇಶದ ಹಲವು ರಾಜ್ಯಗಳ ಗಣ್ಯರು ಭಾಗವಹಿಸಲಿದ್ದಾರೆ.














