ಹಾಸನ: ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಬರ ಅಧ್ಯಯನದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡರು ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ
ಎಂದು ಹೇಳಿದ್ದಾರೆ. ಸದಾನಂದಗೌಡರು ಪ್ರಸ್ತುತ ಅವರು ಲೋಕಸಭೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ‘ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷಗಳ ಕಾಲ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಮತ್ತು ನರೇಂದ್ರ ಮೋದಿ ಸರ್ಕಾರದಲ್ಲಿ ಏಳು ವರ್ಷ ಸಂಪುಟ ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಹೆಚ್ಚು ಆಸೆಪಡಬಾರದು ಎಂದು ಹೇಳಿದರು.
ಜೆಡಿಎಸ್ ಜತೆಗಿನ ಮೈತ್ರಿ ಎನ್ಡಿಎ ನಿರ್ಧಾರ ಎನ್ಡಿಎ ವಿಚಾರಕ್ಕೆ ಬಂದರೆ ನಮ್ಮ ಕೇಂದ್ರ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಇದನ್ನು ಜಾರಿಗೆ ತರಲು ಸೂಕ್ತ ಮಾರ್ಗಸೂಚಿಗಳನ್ನು ನೀಡುವಂತೆ ನಾವು ಅವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಹಾಸನ ಜಿಲ್ಲೆಯಲ್ಲಿ ಬೆಳೆ ನಷ್ಟ ಸಮೀಕ್ಷೆ ನಡೆಸಿದ ಬಳಿಕ ಸದಾನಂದ ಗೌಡ, ಈ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬಿಜೆಪಿಯ ವಿವಿಧ ತಂಡಗಳು ಸಮೀಕ್ಷೆ ನಡೆಸುತ್ತಿವೆ. ವರದಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಲ್ಲಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.









