ಬೆಂಗಳೂರು:ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ನಾಳೆ ಸುದ್ದಿಗೋಷ್ಠಿ ಕರೆದಿದ್ದು, ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಅವರ ಮುಂದಿನ
ನಡೆಯ ಬಗ್ಗೆ ಕುತೂಹಲ ಮೂಡಿದೆ. ವಿಶೇಷವಾಗಿ ಕುಟುಂಬ ಸದಸ್ಯರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ. ಸಂಜಯ್ ನಗರದ ನಿವಾಸದಲ್ಲಿ
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ,ಬೇರೆ ಪಕ್ಷದವರು ಬಂದು ಸಂಪರ್ಕ ಮಾಡುತ್ತಿರುವುದು ಸತ್ಯ. ಬೇರೆ ಬೇರೆ ಸಂಗತಿಗಳು ನಡೆಯುತ್ತಿವೆ. ನನ್ನ ನಿರ್ಧಾರಗಳನ್ನು ನಾನು ನನ್ನ ಕುಟುಂಬದ ಸದಸ್ಯರ ಜೊತೆ ಚರ್ಚಿಸಬೇಕು. ನಂತರವೇ ನಿರ್ಧಾರಕ್ಕೆ ಬರಲಿದ್ದೇನೆ ಎಂದರು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಶೇ.100ರಷ್ಟು ನನ್ನ ಹೆಸರು ಮಾತ್ರ ಬಂದಿತ್ತು. ಆದರೆ ದೆಹಲಿಯಲ್ಲಿ, ಇಲ್ಲಿ ಒಂದಷ್ಟು ವಿದ್ಯಮಾನ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ನಾಳೆ ಸುದ್ದಿಗೋಷ್ಟಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಅಂತ ಈಗಲೇ ಹೇಳಿಬಿಟ್ಟರೆ ನಾಳೆಗೆ ಏನೂ ಉಳಿಯಲ್ಲ ಎಂದರು.
ಈಶ್ವರಪ್ಪ ಅವರನ್ನು ಭೇಟಿ ಮಾಡಿ ಮಾತಾಡಿದ್ದೇನೆ. ಯಾರೆಲ್ಲ ನಾವು ಮನಸಿಗೆ ನೋವಾದವರು, ಪಕ್ಷ ಕಟ್ಟಿದವರು ಇದ್ದೀವೋ ಅವರೆಲ್ಲ ಒಟ್ಟಿಗೆ ಹೋಗಿ ವರಿಷ್ಠರ ಜೊತೆ ಮಾತಾಡಿ ತೀರ್ಮಾನ ತೆಗೆದುಕೊಳ್ಳೋಣ ಅಂದಿದ್ದೆ. ಆದರೆ ಈಶ್ವರಪ್ಪ ಅವರು ಅವರದ್ದೇ ಆದ ನಿರ್ಣಯ ತೆಗೆದುಕೊಂಡಿದ್ದಾರೆ. ಅದರ ಬಗ್ಗೆ ನಾನು ಹೆಚ್ಚು ಮಾತಾಡಲ್ಲ. ನನ್ನ ಬಗ್ಗೆ ನಾನು ನಾಳೆ ಸುದ್ದಿಗೋಷ್ಟಿಯಲ್ಲಿ ವಿವರವಾಗಿ ಎಲ್ಲವನ್ನೂ ಹಂಚಿಕೊಳ್ಳುತ್ತೇನೆ ಎಂದರು.









