ನವದೆಹಲಿ:ಲೋಕಸಭಾ ಚುನಾವಣೆಗೆ ಮುನ್ನ ನಡೆದ ಸೆಮಿಫೈನಲ್ ಎಂದೇ ಬಿಂಬಿತವಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಡ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರಲಿದೆ. ಮಧ್ಯಪ್ರದೇಶವನ್ನು ಉಳಿಸುವುದರ ಜೊತೆಗೆ ರಾಜಸ್ಥಾನ ಹಾಗೂ ಛತ್ತೀಸ್ಗಡದಲ್ಲಿ ಅಧಿಕಾರ ಪಡೆಯುವುದರ
ಮೂಲಕ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿಯ ಆತ್ಮವಿಶ್ವಾಸ ಹೆಚ್ಚಿಸಿದೆ.ಬಿಜೆಪಿ-ಕಾಂಗ್ರೆಸ್ ಮಧ್ಯೆ ತೀವ್ರ ಹೋರಾಟ ನಡೆದ 90 ಸ್ಥಾನಗಳ ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 54 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆರಂಭದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರೂ ಬಿಜೆಪಿ ಭರ್ಜರಿ ಕಮ್ ಬ್ಯಾಕ್ ನಡೆಸಿತು.
ರಾಜಸ್ಥಾನದಲ್ಲಿ ಬಿಜೆಪಿ ಬಹುಮತ ಪಡೆದಿದೆ. 200 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 68 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
230 ಸ್ಥಾನಗಳ ಮಧ್ಯಪ್ರದೇಶದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಏರಿದೆ. ಬಿಜೆಪಿ 161, ಕಾಂಗ್ರೆಸ್ 66 ಸ್ಥಾನಗಳಲ್ಲಿ ಮುನ್ನಡೆ ಪಡೆದಿದೆ.
119 ಸ್ಥಾನಗಳ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಎರಲು ಸಿದ್ಧವಾಗಿದೆ. ಕಾಂಗ್ರೆಸ್ 64, ಆಡಳಿತಾರೂಢ ಬಿಆರ್ಎಸ್ 41 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮೂರನೇ ಬಾರಿ ಅಧಿಕಾರಕ್ಕೇರುವ ಚಂದ್ರಶೇಖರ ರಾವ್ ಕನಸು ಭಗ್ನವಾಗಿದೆ.












