ಮಂಗಳೂರು: ಪರಿಸರ ಅಸಮತೋಲನದಿಂದ ರಾಜ್ಯದಲ್ಲಿ ಮಾನವ -ಪ್ರಾಣಿ ಸಂಘರ್ಷ ಹೆಚ್ಚಾಗಿದ್ದು ಆನೆಗಳ ಆವಾಸಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲು ರಚಿಸಿದ ಆನೆ ಕಾರ್ಯಪಡೆ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಮತ್ತು ಅರಣ್ಯ ಇಲಾಖೆ ಮಂಗಳೂರು ನಗರ ಹೊರವಲಯದ
ಪಿಲಿಕುಳದ ಸ್ಕೌಟ್ಸ್ ಭವನದಲ್ಲಿ ಆಯೋಜಿಸಿರುವ ಹಕ್ಕಿ ಹಬ್ಬವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು ಕಾಡಂಚಿನಲ್ಲಿ ಪ್ರಾಣಿಗಳ ಆಕ್ರಮಣದಿಂದ ರಾಜ್ಯದಲ್ಲಿ ಪ್ರತಿವರ್ಷ 45ರಿಂದ 50 ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಬೆಂಗಳೂರಿನಲ್ಲಿ ಸಮಗ್ರ ನಿರ್ವಹಣಾ ಕೇಂದ್ರ ಸ್ಥಾಪಿಸಲಾಗಿದೆ ಎಂದರು.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಜಾರಿಗೆ ಬಂದ ನಂತರ ಹುಲಿ ಮತ್ತು ಆನೆಗಳ ಸಂಖ್ಯೆ ಹೆಚ್ಚಾಗಿದೆ.ಅದಕ್ಕನುಗುಣವಾಗಿ ಅರಣ್ಯ ಪ್ರದೇಶ ಅಭಿವೃದ್ಧಿಯಾಗಲಿಲ್ಲ. ಅರಣ್ಯ ಭೂಮಿ ಒತ್ತುವರಿ ಹೆಚ್ಚಾಗಿರುವುದು ಕೂಡ ಮಾನವ–ಪ್ರಾಣಿ ಸಂಘರ್ಷಕ್ಕೆ ಕಾರಣವಾಗಿದೆ ಎಂದು ಸಚಿವರು ಹೇಳಿದರು.
ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದಾಗಿ ಮಳೆ ಏರುಪೇರಾಗುತ್ತಿದೆ. ಹೀಗಾಗಿ ಅರಣ್ಯ, ಪರಿಸರ ಉಳಿಯಬೇಕು. ವಲಸೆ ಹಕ್ಕಿಗಳನ್ನು ಗುರುತಿಸಿ ಅವುಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ ಪರಿಸರಕ್ಕೂ ಆರೋಗ್ಯಕ್ಕೂ ಸಂಬಂಧವಿದೆ. ಪರಿಸರ ಉಳಿಸದೇ ಇದ್ದರೆ ಭವಿಷ್ಯ ಸಂಕಷ್ಟಮಯವಾಗಲಿದೆ. ಪಶ್ಚಿಮ ಘಟ್ಟ ಅಳಿದು ಹೋದರೆ ಕರ್ನಾಟಕ ರಾಜ್ಯಕ್ಕೆ ದೊಡ್ಡ ನಷ್ಟವಾಗಲಿದೆ ಎಂದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ಐವನ್ ಡಿಸೋಜ, ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಗಫೂರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್, ಉಪಾಧ್ಯಕ್ಷ ರಮಾನಾಥ ರೈ, ಅರಣ್ಯ ಇಲಾಖೆ ಅಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಧಾ, ಕರಿಕಾಲನ್, ಆಂಟನಿ ಮರಿಯಪ್ಪ ಮತ್ತಿತರರು ಪಾಲ್ಗೊಂಡಿದ್ದರು.
ಮಂಗಳೂರಿನ ಕದ್ರಿ ಉದ್ಯಾನದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಕಟ್ಟಡವನ್ನು ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು. ದಿನೇಶ್ ಗುಂಡೂರಾವ್ ಯು.ಟಿ ಖಾದರ್ ಕ್ಯಾಪ್ಟನ್ ಬ್ರಿಜೇಶ್ ಚೌಟ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಐವನ್ ಡಿಸೋಜ ಪಾಲ್ಗೊಂಡಿದ್ದರು.












