ಅಡಿಲೇಡ್: ಈ ಬಾರಿಯ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್, ಭಾರತದ ವಿರುದ್ಧ 10 ವಿಕೆಟ್ ಅಂತರದ ಸುಲಭ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ
ಇಂಗ್ಲೆಂಡ್ 16 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 170 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು. ಇಂಗ್ಲೆಂಡ್ ಪರ ಆರಂಭಿಕರಾದ ನಾಯಕ ಜಾಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಭಾರತದ ಬೌಲರ್‌ಗಳೆದುರು ಲೀಲಾಜಾಲವಾಗಿ ಬ್ಯಾಟ್ ಬೀಸಿ ಭರ್ಜರಿ ಜಯ ತಂದುಕೊಟ್ಟರು.
ಹೇಲ್ಸ್ ಕೇವಲ 47 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 4 ಬೌಂಡರಿ ಸಹಿತ 86 ರನ್ ಚಚ್ಚಿದರು. ಅವರಿಗೆ ಉತ್ತಮ ಬೆಂಬಲ ನೀಡಿದ ಬಟ್ಲರ್ 49 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿ ಸಹಿತ 80 ರನ್ ಸಿಡಿಸಿದರು. ಇದು ಈ ಬಾರಿಯ ವಿಶ್ವಕಪ್‌ನಲ್ಲಿ ಯಾವುದೇ ತಂಡದ ಪರ ಮೊದಲ ವಿಕೆಟ್ ಜೊತೆಯಾಟದಲ್ಲಿ ಬಂದ ಅತ್ಯಧಿಕ ಮೊತ್ತವಾಗಿದೆ. ಟೂರ್ನಿಯ ಫೈನಲ್ ಪಂದ್ಯವು ನವೆಂಬರ್ 13ರಂದು ಮೆಲ್ಬರ್ನ್‌ನಲ್ಲಿ ನಡೆಯಲಿದೆ. ಈಗಾಗಲೇ ಫೈನಲ್ ತಲುಪಿರುವ ಪಾಕಿಸ್ತಾನ ಮತ್ತು ಇಂಗ್ಲೆಂಡ್ ಪ್ರಶಸ್ತಿಗಾಗಿ ಸೆಣಸಾಡಲಿವೆ.