ಮುಂಬೈ:ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು ನೂತನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ. ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ
ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ.
2021ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಭಾರತ ತಂಡಕ್ಕೆ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದ ರಾಹುಲ್ ದ್ರಾವಿಡ್ ಅವರ ಅವಧಿ 2024ರ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಅಂತ್ಯವಾಗಿದೆ. ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಆಗಿದೆ. ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ತಂಡ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ನೀಗಿಸಿಕೊಂಡಿದೆ.