ಸುಳ್ಯ:ಗೃಹಲಕ್ಷ್ಮಿ,ಶಕ್ತಿ ಯೋಜನೆಯ ಮೂಲಕ ಕರ್ನಾಟಕ ರಾಜ್ಯ ಸರಕಾರ ಮಹಿಳೆಯರಿಗೆ ಸ್ವಾವಲಂಬನೆಯ ಬದುಕನ್ನು ನೀಡಿದೆ ಎಂದು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್ ಹೇಳಿದ್ದಾರೆ.ಇದೀಗ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಕಂತು ಮೊತ್ತ 6 ಸಾವಿರ ರೂಗಳನ್ನು ಫಲಾನುಭವಿಗಳಿಗೆ ನೀಡುವ ಮೂಲಕ
ಆರ್ಥಿಕ ಸಬಲೀಕರಣವನ್ನು ನೀಡಿದೆ. ಪಂಚ ಗ್ಯಾರಂಟಿ ಯೋಜನೆಯ ಮೂಲಕ ಸರಕಾರ ಮಹಿಳೆಯರಿಗೆ ಮತ್ತು ಗ್ರಾಮೀಣ ಜನರಿಗೆ ಸ್ವಾವಲಂಬನೆಯ ಬದುಕನ್ನು ನೀಡಿದೆ. ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆದ ಜನರು ಸರಕಾರಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸುತ್ತಾರೆ. ಅಲ್ಲದೆ ರಾಜ್ಯ ಸರಕಾರ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲು 16 ಸಾವಿರ ಕೋಟಿ ರೂಗಳನ್ನು ಮಂಜೂರು ಮಾಡಿದೆ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಇದು ಸಹಾಯಕವಾಗಲಿದೆ. ಆದರೆ ಬಿಜೆಪಿಯವರು ಪ್ರತಿಭಟನೆಯ ನಾಟಕ ಮಾಡುತ್ತಿದ್ದಾರೆ.ರಾಜ್ಯ ಸರಕಾರ ಗ್ರಾಮೀಣ ಭಾಗದ ಅಭಿವೃದ್ಧಿಗೆ ಅನುದಾನ ನೀಡುತ್ತಿದ್ದರೆ ಕೇಂದ್ರ ಸರಕಾರ ಗ್ರಾಮೀಣ ಭಾಗವನ್ನು ಕಡೆಗಣಿಸುತಿದೆ. 15ನೇ ಹಣಕಾಸು ಯೋಜನೆಯ ಅನುದಾನ ಗ್ರಾಮ ಪಂಚಾಯತ್ಗಳಿಗೆ ಬಂದಿಲ್ಲ.ಇದರ ವಿರುದ್ಧ ಹೋರಾಟ ಮಾಡಬೇಕಾಗಿದೆ ಎಂದು ಗೀತಾ ಕೋಲ್ಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















