ನವದೆಹಲಿ: ರಾಜ್ಯಸಭಾ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಖಾತೆ ಸಚಿವ ಜಾರ್ಜ್ ಕುರಿಯನ್ ಅವರು ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕುರಿಯನ್ ಅವರಿಗೆ
ಬಿಜೆಪಿ ಮತ್ತೆ ಅವಕಾಶ ನೀಡಿರಲಿಲ್ಲ.ಕುರಿಯನ್ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ಕುರಿಯನ್ ಅವರು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ರಾಜ್ಯ ಖಾತೆ ಸಚಿವರಾಗಿಯೂ ಜವಾಬ್ದಾರಿ ಹೊಂದಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ಮುರ್ಮು ಅವರು ಕುರಿಯನ್ ನೀಡಿದ್ದ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ವರದಿಯಾಗಿದೆ.
ಕುರಿಯನ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಜೂನ್ 21ರಂದು ಕೊನೆಗೊಂಡಿತ್ತು.2024ರ ಜೂನ್ 9ರಂದು ಕೇಂದ್ರದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದಕ್ಕೂ ಮುನ್ನ, ಕುರಿಯನ್ ಅವರು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷರಾಗಿದ್ದರು.






