ಮೈಸೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ಅದ್ಧೂರಿ ಚಾಲನೆ ದೊರಕಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಶೇಷ ಅತಿಥಿ ರಾಹುಲ್ ಗಾಂಧಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಸದಸ್ಯರು, ಶಾಸಕರು ಸಾಕ್ಷಿಯಾದರು. ನಂತರ ಮಾತನಾಡಿದ
ರಾಹುಲ್ ಗಾಂಧಿ, ‘ಚುನಾವಣೆಗೂ ಮುನ್ನ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿದರು. ಇವೆಲ್ಲ ಅಸಾಧ್ಯ ಎಂದೇ ಹೇಳಲಾಗಿತ್ತು. ಮಹಿಳೆಯರು ಉಚಿತವಾಗಿ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಉಚಿತವಾಗಿ ಪ್ರತಿ ಮನೆಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ. ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತಿದೆ. ಶೀಘ್ರದಲ್ಲೇ ನಿರುದ್ಯೋಗಿಗಳಿಗಾಗಿ ಯುವನಿಧಿ ಕಾರ್ಯಕ್ರಮವೂ ಅನುಷ್ಠಾನಕ್ಕೆ ಬರಲಿದೆ’ ಎಂದರು. ‘ಗೃಹಲಕ್ಷ್ಮಿ ಯೋಜನೆಯು ವಿಶ್ವದಲ್ಲೇ ಅತ್ಯಂತ ದೊಡ್ಡ ಯೋಜನೆ. ಇಂಥ ಯೋಜನೆ ಬೇರೆಲ್ಲೂ ಇಲ್ಲ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ಎಲ್ಲ ಭರವಸೆಗಳನ್ನೂ ಈಡೇರಿಸುವ ವಿಶ್ವಾಸವಿದೆ. ಸರ್ಕಾರದ ಯಾವುದೇ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಉದ್ಘಾಟನೆ ಬಳಿಕ ಸಚಿವ ಡಾ.ಎಚ್.ಸಿ.ಮಹದೇವಪ್ಪ ದೇಶದ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು. ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸ್ವಾಗತಿಸಿದರು.
ಸಚಿವರಾದ ಎನ್.ಎಸ್.ಬೋಸರಾಜು, ಎನ್.ಚಲುವರಾಯಸ್ವಾಮಿ, ಕೆ.ಎಚ್.ಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.